ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ನಷ್ಟವಾಗಿದೆ.

ಕೊಪ್ಪಳ ಜಿಲ್ಲೆಯ ಮುಂಡರಗಿ ಸೇರಿದಂತೆ ಒಟ್ಟು 83 ಗ್ರಾಮಗಳಲ್ಲಿ ಕುಡಿಯುವ ನೀರು ಯೋಜನೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಒಂದೇ ಒಂದು ಗ್ರಾಮಕ್ಕೆ ಕುಡಿಯುವ ನೀರು ಒದಗಿಸಿಲ್ಲ ಮತ್ತು ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆದರೂ 45 ಕೋಟಿ ರು.ಮೊತ್ತದ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಪೂರ್ಣಗೊಳ್ಳದಿದ್ದರೂ 45 ಕೋಟಿ ರು. ಅನುದಾನ ಬಿಡುಗಡೆ ಮಾಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಈವರೆವಿಗೂ ಒಂದೇ ಒಂದು ಕ್ರಮ ಜರುಗಿಸಿಲ್ಲ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಲೆಕ್ಕಶೀರ್ಷಿಕೆ 3054ರಲ್ಲಿ 79 ಕೋಟಿ ರು.ಬಿಡುಗಡೆಯಲ್ಲಿ ಆಗಿರುವ ಅಕ್ರಮಗಳು ಹೊರಬಿದ್ದ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯಲ್ಲಿ ಕಾಮಗಾರಿ ಪೂರ್ಣಗೊಳ್ಳದಿದ್ದರೂ 45 ಕೋಟಿ ರು.ಬಿಡುಗಡೆಯಾಗಿರುವ ಪ್ರಕರಣ ಮುನ್ನೆಲೆಗೆ ಬಂದಿದೆ.

ಕೊಪ್ಪಳ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ 2020ರ ನವೆಂಬರ್‌ 20ರಂದು ನಡೆದ ಕೆಡಿಪಿ ಸಭೆಯಲ್ಲಿ ಈ ಪ್ರಕರಣ ಕುರಿತು ಚರ್ಚೆಯಾಗಿದೆ. ಸಭೆ ಅಧ್ಯಕ್ಷತೆ ವಹಿಸಿದ್ದ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರು ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಯೋಜನೆಯ ಪ್ರಾಯೋಗಿಕ ಹಂತದಲ್ಲಿ ಜಿ.ಆರ್.ಪಿ ಪೈಪುಗಳು ಒಡೆದು ಹೋಗಿವೆ. ಕಾಮಗಾರಿ ನಿಷ್ಕ್ರೀಯಗೊಂಡಿದೆ. ಹೀಗಾಗಿ ಕಾಮಗಾರಿಯೂ ಪೂರ್ಣಗೊಂಡಿಲ್ಲ. ಆದರೂ 45 ಕೋಟಿ ರು.ಮೊತ್ತದ ಅನುದಾನ ಬಿಡುಗಡೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕಾಮಗಾರಿ ಪೂರ್ಣಗೊಂಡಿದೆಯೆ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕಿದ್ದ ಸ್ಥಳೀಯ ಅಧಿಕಾರಿಗಳು, ಕಮಿಷನ್‌ ಆಸೆಗಾಗಿ ಅಪೂರ್ಣ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಸಿಕೊಂಡು ಜೇಬು ತುಂಬಿಸಿಕೊಂಡಿದ್ದಾರೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ.

‘ಪೂರ್ಣಗೊಂಡಿರುವ ಕಾಮಗಾರಿಗಳ ಪ್ರಮಾಣ, ಬಿಡುಗಡೆಯಾದ ಹಣ ಮತ್ತು ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳ ಬಗ್ಗೆ ವಿವರವಾರದ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಹಾಗೆಯೇ ಸಂಬಂಧಿಸಿದ ಏಜೆನ್ಸಿ ವಿರುದ್ಧ ಕ್ರಮ ವಹಿಸುವ ಮೂಲಕ ಇಡೀ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು,’ ಎಂದು ಸಚಿವ ಬಿ ಸಿ ಪಾಟೀಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯಲ್ಲಿ ಇಂತಹ ಹಲವು ಪ್ರಕರಣಗಳು ನಡೆಯುತ್ತಿದ್ದರೂ ಈ ಕುರಿತು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಕೊಪ್ಪಳ ಸೇರಿದಂತೆ ರಾಜ್ಯದ ಹಲವೆಡೆಯೂ ಇಂತಹ ಪ್ರಕರಣಗಳು ನಡೆದಿವೆ. ಅರೆಬರೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರಿಗೆ ಕೋಟ್ಯಂತರ ರುಪಾಯಿ ಮೊತ್ತದ ಬಿಲ್‌ಗಳನ್ನು ಪಾವತಿಸಲಾಗುತ್ತಿದೆ. ಇಲಾಖೆ ಕೈಗೆತ್ತಿಕೊಂಡಿರುವ ಕುಡಿಯುವ ನೀರು ಯೋಜನೆ ಕಾಮಗಾರಿಗಳ ಪರಿಶೀಲನೆ ಮತ್ತು ಇದರ ಆಡಿಟ್‌ ಕೂಡ ನಡೆದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

SUPPORT THE FILE

Latest News

Related Posts