ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ; ತರಾತುರಿಯ ಶಿಫಾರಸ್ಸು

ಬೆಂಗಳೂರು; ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ಲಿಂಗಾಯತ ಮತ ಬ್ಯಾಂಕ್‌ನ್ನು ಬಲಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೀಗ ಇನ್ನೂ ಒಂದು ಹೆಜ್ಜೆ ಮುಂದಡಿ ಇಟ್ಟಿದ್ದಾರೆ. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಲು ಮುಂದಾಗಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ರಾಜಕೀಯ ಚಟುವಟಿಕೆಗಳು  ಬಿರುಸುಪಡೆದುಕೊಂಡಿವೆ. ಈ ನಡುವೆಯೇ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆಗೊಳಿಸಲು ಮಾಡಲಿರುವ ಶಿಫಾರಸ್ಸು, ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.

ಒಂದು ವೇಳೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಸಲು ಹೈಕಮಾಂಡ್‌ ನಿರ್ಧರಿಸಿದ್ದರೇ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ನಾಯಕರ ವಿರುದ್ಧ ಎತ್ತಿಕಟ್ಟುವ ಹುನ್ನಾರವೂ ಅಡಗಿದೆ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಂಪುಟದ ಅನುಮೋದನೆಗೆ ತರಾತುರಿಯಲ್ಲಿ (ಹಿಂವಿ ಸಿ 609/2020) ಪ್ರಸ್ತಾವನೆ ಸಲ್ಲಿಸಿದೆ. ನಾಳೆ ನಡೆಯಲಿರುವ ಸಚಿವ ಸಂಪುಟದ ಅನುಮೋದನೆಯೂ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಸಚಿವ ಸಂಪುಟದ ಕಾರ್ಯಸೂಚಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಕೂಡ ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಮುಂದೆ ಪ್ರತಿಪಾದಿಸಿತ್ತು. ಲಿಂಗಾಯತ ಸಮುದಾಯದಲ್ಲಿ ಒಟ್ಟು 102 ಜಾತಿಗಳನ್ನು ಗುರುತಿಸಲಾಗಿದೆ. ಅದರಲ್ಲಿ ಈಗಾಗಲೇ 30 ಜಾತಿಗಳು ಒಬಿಸಿ ಪಟ್ಟಿಯಲ್ಲಿವೆ. ಒಬಿಸಿ ಪಟ್ಟಿಗೆ ಸೇರಿಸುವುದಾದರೆ ಉಳಿದ 72 ಜಾತಿಗಳನ್ನು ಸೇರಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾದರೆ ಲಿಂಗಾಯತ ಶಿರೋನಾಮೆಯಲ್ಲೇ ಕೊಡಬೇಕು ಎಂದು ಮಹಾಸಭಾ ಹಕ್ಕೊತ್ತಾಯ ಮಂಡಿಸಿತ್ತು.

ಆದರೀಗ ಬಿಜೆಪಿ ಸರ್ಕಾರವು ಲಿಂಗಾಯತ ಶಿರೋನಾಮೆಯಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದೆಯೇ ವೀರಶೈವ ಹೆಸರನ್ನೂ ಸೇರ್ಪಡೆಗೊಳಿಸಿರುವುದು ಜಾಗತಿಕ ಲಿಂಗಾಯತ ಮಹಾಸಭಾದ ಕೆಂಗಣ್ಣಿಗೂ ಗುರಿಯಾಗುವ ಸಾಧ್ಯತೆಗಳಿವೆ.

ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಲ್ಲೇ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮುದಾಯ ಪ್ರತಿನಿಧಿಗಳು ಪ್ರತಿಭಟನೆ ನಡೆಸಿದ್ದನ್ನು ಸ್ಮರಿಸಬಹುದು.
ಲಿಂಗಾಯತ ಸಮುದಾಯದಲ್ಲಿ ನಮಗೆ ಅಲ್ಪಸಂಖ್ಯಾತ ಸ್ಥಾನಮಾನ ಬೇಡ ಆದರೆ ಮೀಸಲಾತಿ ಬೇಕಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಸಮುದಾಯದವರನ್ನು ಗುರುತಿಸಿ ಮೀಸಲಾತಿ ನೀಡಬೇಕು, ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಮರಾಠಿಗರಿಗೆ ನೀಡಿರುವ ರೀತಿಯಲ್ಲಿ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೂ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು.

the fil favicon

SUPPORT THE FILE

Latest News

Related Posts