ಕಾಕಂಬಿ ರಫ್ತು ಹಗರಣ; ಎಫ್‌ಐಆರ್‍‌ ದಾಖಲಿಸದ ಎಸ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ

ಬೆಂಗಳೂರು; ಅಂದಾಜು 260 ಕೋಟಿ ರು.ಮೌಲ್ಯದ ಕಾಕಂಬಿಯನ್ನು ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈ ಲಿಮಿಟೆಡ್‌ಗೆ ರಫ್ತು ಮಾಡಲು ನೀಡಿರುವ ಅನುಮತಿಯಲ್ಲಿ ನಿಯಮಬಾಹಿರ ಚಟುವಟಿಕೆಗಳು ನಡೆದಿರುವ ಪ್ರಕರಣದಲ್ಲಿ  ಎಫ್‌ಐಆರ್‍‌ ದಾಖಲಿಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ಕರ್ನಾಟಕ ಲೋಕಾಯುಕ್ತ ಎಸ್‌ ಪಿ ಗೆ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ.

 

 

ಕಾಕಂಬಿ ರಫ್ತು ಮಾಡಲು ಅನುಮೋದನೆ ನೀಡಿರುವುದರ ಹಿಂದೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು 8 ಕೋಟಿ ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು 2022ರ  ಅಕ್ಟೋಬರ್‌ 13ರಂದು ವರದಿ ಪ್ರಕಟಿಸಿದ್ದ  ‘ದಿ ಫೈಲ್‌’  ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಸಹಿತ ಸರಣಿ ವರದಿಗಳನ್ನು ಪ್ರಕಟಿಸಿತ್ತು.

 

ಅಬಕಾರಿ ಹಗರಣ; ಗೋವಾ ಬಂದರು ಮೂಲಕ ಕಾಕಂಬಿ ರಫ್ತಿನ ಅನುಮತಿಗೆ 8 ಕೋಟಿ ಕಿಕ್‌ಬ್ಯಾಕ್‌ ಆರೋಪ

ಎಂ-2 ಲೈಸೆನ್ಸ್‌ ಇಲ್ಲದೇ ಇದ್ದರೂ 2 ಲಕ್ಷ ಮೆಟ್ರಿಕ್ ಟನ್‌ ಪ್ರಮಾಣದ ಕಾಕಂಬಿಯನ್ನು ಕೆ ಎನ್‌ ರಿಸೋರ್ಸ್‌ ಪ್ರೈ ಲಿ.,ಗೆ ರಫ್ತು ಮಾಡಲು ನೀಡಿರುವ ಅನುಮೋದನೆಯಲ್ಲಿ ಅಬಕಾರಿ ಸಚಿವರಾಗಿದ್ದ ಕೆ ಗೋಪಾಲಯ್ಯ, ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ ಎಸ್‌ ಎನ್‌ ಪ್ರಸಾದ್‌, ಡಾ ಏಕರೂಪ್‌ ಕೌರ್  ಸೇರಿದಂತೆ ಅಬಕಾರಿ ಇಲಾಖೆಯ ಹಲವು ಅಧಿಕಾರಿಗಳ ವಿರುದ್ಧ ಲಂಚಮುಕ್ತ ಕರ್ನಾಟಕ ನಿರ್ಮಾಣ  ವೇದಿಕೆಯ ರಾಜ್ಯ ಉಪಾಧ್ಯಕ್ಷ   ಮಂಜುನಾಥ್‌ ಅವರು ಲೋಕಾಯುಕ್ತಕ್ಕೆ ದಾಖಲೆಗಳ  ಸಹಿತ ದೂರು ದಾಖಲಿಸಿದ್ದರು.

 

ಆದರೆ ಈ ದೂರನ್ನಾಧರಿಸಿ ಎಫ್‌ಐಆರ್‍‌ ದಾಖಲಿಸಿಕೊಂಡು ತನಿಖೆ ನಡೆಸಬೇಕಿದ್ದ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಹೀಗಾಗಿ ಲಂಚಮುಕ್ತ ಕರ್ನಾಟಕ ವೇದಿಕೆಯು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇಲಾಖೆಯ ಸಚಿವರಾಗಿದ್ದ ಕೆ ಗೋಪಾಲಯ್ಯ ಅವರನ್ನು ಮೊದಲ ಪ್ರತಿವಾದಿಯನ್ನಾಗಿ ಸಲ್ಲಿಸಿದ್ದ  ಈ ದೂರನ್ನು ಅಂಗೀಕರಿಸಿರುವ ನ್ಯಾಯಾಲಯವು (P.C.R./0000021/2023) ಲೋಕಾಯುಕ್ತ ಎಸ್ಪಿಗೆ 2023ರ ಜೂನ್‌ 30ರಂದು  ಸಮನ್ಸ್‌  ಜಾರಿಗೊಳಿಸಲಾಗಿದೆ.

 

ಪ್ರಕರಣ ಸಂಬಂಧ ವಸ್ತು ಸ್ಥಿತಿ ವರದಿ ಸಲ್ಲಿಸಬೇಕು ಎಂದು ಸೂಚಿಸಿ ಪ್ರಕರಣದ ವಿಚಾರಣೆಯನ್ನು 2023ರ ಜುಲೈ 25ಕ್ಕೆ ಮುಂದೂಡಿದೆ.

 

 

ಈ ಪ್ರಕರಣ ಕುರಿತು ಮೊದಲು  ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದ ಕಾಂಗ್ರೆಸ್‌, ಇದೀಗ ಅಧಿಕಾರ ಗದ್ದುಗೆ ಹಿಡಿದು ತಿಂಗಳಾದರೂ ಈ ಪ್ರಕರಣದ ಬಗ್ಗೆ ಉಸಿರೆತ್ತದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿತ್ತು. ಆದರೀಗ ಜನಪ್ರತಿನಿಧಿಗಳ ನ್ಯಾಯಾಲಯವು ಲೋಕಾಯುಕ್ತ ಎಸ್ಪಿಗೆ ನೀಡಿರುವ ಸಮನ್ಸ್‌ ಪ್ರಕರಣಕ್ಕೆ ಮಹತ್ವ ತಂದುಕೊಟ್ಟಂತಾಗಿದೆ.

 

ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರದ ಆರ್ಥಿಕ ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಪ್ರಭಾವ ಬೀರಿದ್ದಾರೆ ಎಂದು ಆಡಿಯೋ ಪುರಾವೆ ಮತ್ತು ಈ ಸಂಬಂಧ ಲಂಚಮುಕ್ತ ಕರ್ನಾಟಕ ವೇದಿಕೆಯು ಸಲ್ಲಿಸಿದ್ದ ದೂರನ್ನಾಧರಿಸಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹಾಲಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ವಿಧಾನಪರಿಷತ್‌ನ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ನ ವಕ್ತಾರ ರಮೇಶ್‌ಬಾಬು ಅವರು ಇದೀಗ ಈ ಪ್ರಕರಣದಲ್ಲಿ ಮೌನ ವಹಿಸಿರುವುದು ಸಹ ಸಂದೇಹಗಳಿಗೆ ಕಾರಣವಾಗಿತ್ತು.

 

ಪಿಎಸ್‌ಐ ಹಗರಣವೂ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಹಲವು ಹಗರಣಗಳ ಕುರಿತು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಆದಿಯಾಗಿ ಕಾಂಗ್ರೆಸ್‌ ಸರ್ಕಾರದ ಹಲವು ಸಚಿವರು ಹೇಳುತ್ತಿದ್ದಾರಾದರೂ 260 ಕೋಟಿ ಮೌಲ್ಯದ ಕಾಕಂಬಿ ರಫ್ತು ಪರವಾನಿಗೆ ಹಗರಣದ ಕುರಿತು ಕಾಂಗ್ರೆಸ್‌ನ ಯಾವೊಬ್ಬ ಸಚಿವರೂ ಇದುವರೆಗೂ ತುಟಿ ಬಿಚ್ಚಿಲ್ಲ.

 

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪ್ರಿಯಾಂಕ್‌ ಖರ್ಗೆ ಮತ್ತು ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ಬಾಬು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಣಕಾಸು ಸಚಿವರ ಹೆಸರು ಪ್ರಸ್ತಾಪವಾಗಿರುವ ಆಡಿಯೋವನ್ನು ಬಹಿರಂಗಗೊಳಿಸಿದ್ದರು.

 

‘ಬಿಜೆಪಿಯವರು ಯಾವುದನ್ನು ಬಿಡದೇ ಲೂಟಿಗಿಳಿದಿದ್ದಾರೆ. ಅಬಕಾರಿ ಇಲಾಖೆಯಲಲ್ಇಒ ಕಾಕಂಬಿಯಲ್ಲೂ ಹಗರಣ ನಡೆಯುತ್ತಿದೆ. ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಖಾಶಗಿ ಕಂಪನಿ ಬಳಿ ಯಾವುದೇ ದಾಖಲೆ ಇಲ್ಲದಿದ್ದರೂ ಎಂ 1 ಎಂ 2 ಪರವಾನಿಗೆ ಕೊಟ್ಟಿದ್ದಾರೆ. ಕೇವಲ 2 ತಿಂಗಳಲ್ಲಿ ಯಾವುದೇ ದಾಖಲೆ ಇಲ್ಲದಿದ್ದರೂ ಪರವಾನಿಗೆ ನೀಡಿದ್ದಾರೆ,’ ಎಂದು ಪ್ರಿಯಾಂಕ್‌ ಖರ್ಗೆ ಅವರು ಆರೋಪಿಸಿದ್ದರು.

 

ಕಾಕಂಬಿ ರಫ್ತು ಹಗರಣದಲ್ಲಿ ಸ್ವತಃ ಸಿಎಂ ಡೀಲಿಗೆ ಇಳಿದಿರುವ ಸಂಗತಿ ಬಹಿರಂಗವಾಗಿದೆ. ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಮಾತನಾಡಲು ಹೆದುರುತ್ತಿರುವುದೇಕೆ, ನಿಯಮ ಮೀರಿ ಕಾಕಂಬಿ ರಫ್ತು ಮಾಡಲು ಸಹಕರಿಸಿದ್ದೇಕೆ? ಯಥಾ ಪ್ರಕಾರ ದಾಖಲೆ ಕೊಡಿ, ಸಾಕ್ಷಿ ಕೊಡಿ ಎನ್ನುವಿರಾ ಅಥವಾ ಸೂಕ್ತ ತನಿಖೆಯ ಅಗ್ನಿಪರೀಕ್ಷೆಗೆ ಒಳಪಟ್ಟು ಪ್ರಾಮಾಣಿಕತೆ ಸಾಬೀತುಪಡಿಸುವಿರಾ ಎಂದು ಪ್ರಶ್ನಿಸಿದ್ದರು.

 

ಬಿಜೆಪಿ ಸಂಸದರು ನೇರವಾಗಿ ಸಿ ಎಂ ಬಳಿ ಈ ಡೀಲ್‌ ಮಾಡಿದ್ದಾರೆ. ಇದು ದೊಡ್ಡ ಮಟ್ಟದ ಡೀಲ್‌ ಎಂದು ಅವರು ದೂರವಾಣಿಯಲ್ಲಿ ಮಾತನಾಡುತ್ತಾರೆ. ಮುಖ್ಯಮಂತ್ರಿಗಳೇ ಅಬಕಾರಿ ಸಚಿವರು ಹಾಗೂ ಆಯುಕ್ತರನ್ನು ಕರೆಸಿ ಇದಕ್ಕೆ ಅನುಮತಿ ಕೊಡಿಸಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ನಷ್ಟವಾದರೂ ಸರಿ ಹೈಕಮಾಂಡ್‌ ಮನವೊಲಿಸಲು ಈ ಅನುಮತಿ ಕೊಟ್ಟರಾ ಎಂದೂ ಪ್ರಶ್ನಿಸಿದ್ದನ್ನು ಸ್ಮರಿಸಬಹುದು.

 

260 ಕೋಟಿ ಮೌಲ್ಯದ ಕಾಕಂಬಿ ಹಗರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್‌

 

ಅಗತ್ಯ ದಾಖಲೆಗಳನ್ನು ಹಾಜರುಪಡಿಸದಿದ್ದರೂ ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ ಎಂದು ಆರೋಪಿಸಿರುವ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಅವರು ಕಾಕಂಬಿ ರಫ್ತು ಹಗರಣದ ಸತ್ಯಾಸತ್ಯತೆಯನ್ನು ಹೊರತರಲು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

 

ಅಬಕಾರಿ ಹಗರಣ; ‘ದಿ ಫೈಲ್‌’ ವರದಿ ಉಲ್ಲೇಖಿಸಿ ತನಿಖೆಗೆ ಆಗ್ರಹಿಸಿ ಹೇಳಿಕೆ ಬಿಡುಗಡೆ

 

 

ಕೆ ಎನ್ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಎಂ-2 ಲೈಸೆನ್ಸ್‌ ಇಲ್ಲದಿದ್ದರೂ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ರಫ್ತು ಮಾಡಲು ಅನುಮೋದನೆ ನೀಡಿದ್ದನ್ನು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡ ದಾಖಲೆಗಳನ್ನಾಧರಿಸಿ 2022ರ ನವಂಬರ್‌ 30ರಂದು ವರದಿ ಪ್ರಕಟಿಸಿತ್ತು.

 

ಅಬಕಾರಿ ಹಗರಣ; ಪರವಾನಿಗೆ ಇಲ್ಲದಿದ್ದರೂ ಮರೆಮಾಚಿ ಮುಂಬೈ ಕಂಪನಿಗೆ ಕಾಕಂಬಿ ರಫ್ತಿಗೆ ಅನುಮತಿ

 

ಈ ಕುರಿತು ಲಂಚಮುಕ್ತ ಕರ್ನಾಟಕ ವೇದಿಕೆಯು ಪ್ರಧಾನಿಗೂ ದೂರು ಸಲ್ಲಿಸಿತ್ತು.

 

ಅಬಕಾರಿ ಹಗರಣ; ಸಚಿವ ಗೋಪಾಲಯ್ಯ ಸೇರಿ ಅಧಿಕಾರಿಗಳ ವಿರುದ್ಧ ಪ್ರಧಾನಿಗೆ ದೂರು

ಈ ಹಗರಣದಲ್ಲಿ ಪ್ರಭಾವಿ ರಾಜಕಾರಣಯೊಬ್ಬರ ಪುತ್ರನ ಹೆಸರು ಪ್ರಸ್ತಾಪವಾಗಿದ್ದ ಆಡಿಯೋವನ್ನಾಧರಿಸಿ ‘ದಿ ಫೈಲ್‌’ 2022ರ ಡಿಸೆಂಬರ್‌ 22ರಂದು ವರದಿ ಪ್ರಕಟಿಸಿತ್ತು.

 

ಅಬಕಾರಿ ಹಗರಣ; ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಹೆಸರು ಆಡಿಯೋದಲ್ಲಿ ಪ್ರಸ್ತಾಪ

 

ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಉದ್ಯಮಿಗಳ ವಲಯದಲ್ಲಿ 25 ಪ್ರಶ್ನೆಗಳು ಕೇಳಿಬಂದಿದ್ದವು. ಈ ಕುರಿತು 2022ರ ಡಿಸೆಂಬರ್‌ 24ರಂದು ವರದಿ ಪ್ರಕಟಿಸಿತ್ತು.

 

ಅಬಕಾರಿ ಹಗರಣದಲ್ಲಿ ಪ್ರಭಾವಿ ಪುತ್ರನ ಹೆಸರು ಪ್ರಸ್ತಾಪ; ಮುನ್ನೆಲೆಗೆ ಬಂದ 25 ಪ್ರಶ್ನೆಗಳು

 

ನಿಯಮಬಾಹಿರವಾಗಿ ಹೊರ ರಾಜ್ಯದ ಕಂಪನಿಗೆ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ರಫ್ತುಮಾಡಲು ಅನುಮತಿ ನೀಡಿರುವುದು ರಾಜ್ಯದ ಉದ್ಯಮಿಗಳ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆರಂಭದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಕಾಂಗ್ರೆಸ್‌ ಇದೀಗ ಮೌನಕ್ಕೆ ಜಾರಿರುವುದು ಮತ್ತು ರಾಜ್ಯ ಅಬಕಾರಿ ಇಲಾಖೆಯ ನಡೆಯ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.

the fil favicon

SUPPORT THE FILE

Latest News

Related Posts