ವರ್ಗಾವಣೆ, ಸ್ಥಳನಿಯುಕ್ತಿ; ಸಿಎಂ ‘ವಿವೇಚನೆ’ ಅದಲು-ಬದಲು, ಫುಟ್ಬಾಲ್‌ನಂತಾದ ಕೆಎಎಸ್‌ ಅಧಿಕಾರಿಗಳು

ಬೆಂಗಳೂರು; ಕೆಎಎಸ್‌ ಸೇರಿದಂತೆ ಗ್ರೂಪ್‌  ಬಿ, ಸಿ, ಪಿಡಿಒ, ಡಿವೈಎಸ್ಪಿ ಸೇರಿದಂತೆ ಇನ್ನಿತರೆ ವೃಂದದ ಅಧಿಕಾರಿಗಳ ವರ್ಗಾವಣೆ, ಸ್ಥಳ ನಿಯುಕ್ತಿ, ನಿಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿವೇಚನೆಯನ್ನು ಬೇಕಾಬಿಟ್ಟಿಯಾಗಿ ಬಳಸಿಕೊಳ್ಳುತ್ತಿರುವ ಪ್ರಕರಣಗಳು ಸಾಲುಸಾಲಾಗಿ ಬಹಿರಂಗವಾಗುತ್ತಿವೆ.

 

ವರ್ಗಾವಣೆ, ಸ್ಥಳ ನಿಯುಕ್ತಿ, ನಿಯೋಜನೆ ಕಡತಗಳಿಗೆ ಸಹಿ ಮಾಡುವ ಸಿದ್ದರಾಮಯ್ಯ ಅವರು ಹತ್ತಿಪ್ಪತ್ತು ದಿನದಲ್ಲೇ ತಾವೇ ವರ್ಗಾವಣೆ, ಸ್ಥಳ ನಿಯುಕ್ತಿ ಮಾಡಿದ ಅಧಿಕಾರಿಗಳನ್ನು ಎತ್ತಂಗಡಿ ಮಾಡಿರುವುದು ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಾರಂಭಿಸಿದೆ.

 

ಜೆಡಿಎಸ್‌ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಈ ಸರ್ಕಾರದಲ್ಲಿ  ವರ್ಗಾವಣೆ ವ್ಯಾಪಾರ, ಕಾಸಿಗಾಗಿ ಪೋಸ್ಟಿಂಗ್‌ ನಡೆಯುತ್ತಿದೆ ಪದೇ ಪದೇ ವಾಕ್ಸಮರ ನಡೆಸುತ್ತಿದ್ದರೂ ಮುಖ್ಯಮಂತ್ರಿಗಳ ಕಚೇರಿ ತನ್ನ ವರ್ತನೆಯನ್ನು ಬದಲಿಸಿಕೊಳ್ಳುತ್ತಿಲ್ಲ. ಹೀಗಾಗಿಯೇ ವರ್ಗಾವಣೆ, ಸ್ಥಳ ನಿಯುಕ್ತಿ ಆದೇಶಗಳು ಗಂಟೆಗೊಂದರಂತೆ ಹೊರಬೀಳುತ್ತಲೇ ಇವೆ. ಇದಕ್ಕೊಂದು ಇತ್ತೀಚಿನ ನಿದರ್ಶನವೊಂದನ್ನು ‘ದಿ ಫೈಲ್‌’ ಈಗ ಮುಂದಿಡುತ್ತಿದೆ.

 

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2023ರ ಆಗಸ್ಟ್‌ 5ರಂದು 13 ಕೆಎಎಸ್‌ ಅಧಿಕಾರಿಗಳನ್ನು ವರ್ಗಾಯಿಸಿ/ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

 

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್‌ ಹಿರಿಯ ಶ್ರೇಣಿ ಅಧಿಕಾರಿ ಪ್ರಸನ್ನಕುಮಾರ್‍‌ ವಿ ಕೆ ಅವರನ್ನು 2023ರ ಜುಲೈ 17ರಂದು ರಾಯಚೂರು ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ವರ್ಗಾಯಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಅನುಮೋದಿಸಿದ್ದರು.

 

ಆದರೆ ಇದೇ  ಪ್ರಸನ್ನಕುಮಾರ್‍‌ ಅವರ ಸ್ಥಳ ನಿಯುಕ್ತಿ ಆದೇಶವನ್ನು ಮಾರ್ಪಡಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಕರ್ನಾಟಕ ಅಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ 2023ರ ಆಗಸ್ಟ್‌ 5ರಂದು ಅಧಿಸೂಚನೆ ಹೊರಡಿಸಿದೆ.

 

ಹಾಗೆಯೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಹಾವೇರಿ ಜಿಲ್ಲೆಯ ಉಪ ನಿರ್ದೇಶಕರಾಗಿದ್ದ ಡಾ ನಾಗರಾಜ್‌ ಎಸ್‌  ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾಯಿಸಿ  2023ರ ಜುಲೈ 24ರಂದು ಆದೇಶಿಸಲಾಗಿತ್ತು. ಆದರೆ 2023ರ ಆಗಸ್ಟ್‌ 5ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ 2023ರ ಜುಲೈ 24ರಂದು ಹೊರಡಿಸಿದ್ದ ಆದೇಶವು ರದ್ದುಗೊಂಡಿದೆ.

 

ಕೆಎಎಸ್‌ ಕಿರಿಯ ಶ್ರೇಣಿ ಅಧಿಕಾರಿ ಸೋಮಪ್ಪ ಕಡಕೋಳ ಅವರನ್ನು 2023ರ ಜುಲೈ 17ರಂದು ಕೆಪಿಐಡಿ ಕಾಯ್ದೆ ಬಡ್ಸ್‌ ಕಾಯ್ದೆ ಸಕ್ಷಮ ಪ್ರಾಧಿಕಾರದ  ಸಹಾಯಕ ಆಯುಕ್ತರನ್ನಾಗಿ ವರ್ಗಾಯಿಸಲಾಗಿತ್ತು. 2023ರ ಆಗಸ್ಟ್‌ 5ರಂದು ಹೊರಬಿದ್ದಿರುವ ಅಧಿಸೂಚನೆ ಪ್ರಕಾರ ಇವರ ಸ್ಥಳ ನಿಯುಕ್ತಿ ಆದೇಶವು ಮಾರ್ಪಾಡುಗೊಂಡಿದೆ. ಇದರ ಪ್ರಕಾರ ಇವರನ್ನು ಖಾದಿ ಗ್ರಾಮೋದ್ಯೋಗ ಮಂಡಳಿಯ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಿಸಲಾಗಿದೆ.

 

ಅಧಿಕಾರಿಯೊಬ್ಬರ ವರ್ಗಾವಣೆಗಾಗಿ 1.50 ಕೋಟಿ ರು. ಬೇಡಿಕೆ ಇಟ್ಟ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಅವರ ಹೆಸರನ್ನು ಬಳಸಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ತಡರಾತ್ರಿಯಲ್ಲಿ ದೂರನ್ನು ಅದಲುಬದಲು ಮಾಡಿ ಪ್ರಭಾವಿಗಳ ಒತ್ತಡಕ್ಕೆ  ಮಣಿದಿದ್ದ ಕೋಲಾರ ಜಿಲ್ಲಾ ಪೊಲೀಸರು, ದೂರಿನಲ್ಲಿ ವರ್ಗಾವಣೆಗಾಗಿ ಎಂಬ ಪದವನ್ನೇ ಅಳಿಸಿ ಹಾಕಿದ್ದರು.

 

ವರ್ಗಾವಣೆಗಾಗಿ 1.50 ಕೋಟಿ ಬೇಡಿಕೆ; ತಡರಾತ್ರಿ ದೂರೇ ಅದಲು ಬದಲು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಪೊಲೀಸರು!

 

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರು ಸಿಂಧನೂರು ಉಪ ವಿಭಾಗದಲ್ಲಿ ಡಿವೈಎಸ್ಪಿಯಾಗಿರುವ ವೆಂಕಟಪ್ಪ ನಾಯಕ್‌ ಅವರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸ್‌ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2023ರ ಜೂನ್‌ 27ರಂದು ನಡವಳಿ ಪತ್ರವನ್ನು ನೀಡಿದ್ದರು.

 

 

ಅದೇ ರೀತಿ ಸ್ಥಳೀಯ ಕಾಂಗ್ರೆಸ್‌ ಶಾಸಕ ಹೆಚ್‌ ಆರ್‍‌ ಗವಿಯಪ್ಪ ಅವರು ಹೊಸ ಪೇಟೆ ಉಪ ವಿಭಾಗಕ್ಕೆ ಡಿವೈಎಸ್ಪಿ  ಡಾ ಮಂಜುನಾಥ್‌ ಅವರನ್ನು ವರ್ಗಾವಣೆ ಮಾಡಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋರಿದ್ದರು.

 

 

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರ ಶಿಫಾರಸ್ಸು ಪತ್ರಕ್ಕೇ ಕಿಮ್ಮತ್ತು ನೀಡಿ ಸಿಂಧನೂರು ಉಪ ವಿಭಾಗದಲ್ಲಿ ಡಿವೈಎಸ್ಪಿಯಾಗಿರುವ ವೆಂಕಟಪ್ಪ ನಾಯಕ್‌ ಅವರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸ್‌ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿಸಿದ್ದಾರೆ. ಈ ಸಂಬಂಧ 2023ರ ಜುಲೈ 31ರಂದು ಆದೇಶ ಹೊರಬಿದ್ದಿತ್ತು.

ಡಿವೈಎಸ್ಪಿ ವರ್ಗಾವಣೆಯಲ್ಲಿ ಸಿಎಂ ಮೇಲುಗೈ; ಉಸ್ತುವಾರಿ ಸಚಿವರಿಗೆ ಮನ್ನಣೆ, ಕೆರಳಿದ ಶಾಸಕ

 

 

 

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇದ್ದ ಕುಲಸಚಿವರ ಹುದ್ದೆಗೆ ಕೆಎಎಸ್‌ ಅಧಿಕಾರಿಗಳನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೊರಡಿಸಿದ್ದ ಅಧಿಸೂಚನೆಯನ್ನೇ ಬದಿಗೊತ್ತಿರುವ  ಉನ್ನತ ಶಿಕ್ಷಣ ಇಲಾಖೆಯು ಕುಲಸಚಿವರ ಹುದ್ದೆಗಳಿಗೆ  ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರನ್ನು ನೇಮಕಗೊಳಿಸಿ ಅಧಿಸೂಚನೆ ಹೊರಡಿಸಿದ್ದರು.

 

ಡಿಪಿಎಆರ್‍‌ ಅಧಿಸೂಚನೆ ಬದಿಗೊತ್ತಿ ಕುಲಸಚಿವ ಹುದ್ದೆಗೆ ಪ್ರಾಧ್ಯಾಪಕರ ನೇಮಕ; ಸಂಘರ್ಷಕ್ಕೆಡೆ ಮಾಡಿಕೊಟ್ಟಿತೇ?

 

 

 

 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಆದೇಶದಲ್ಲಿ ಒಂದೇ ಪಂಚಾಯ್ತಿಗೆ ಇಬ್ಬರು ಪಿಡಿಒಗಳನ್ನು ವರ್ಗಾಯಿಸಲಾಗಿತ್ತು. ಈ ಪಂಚಾಯ್ತಿಗೆ ಯಾರು ಅಧಿಕಾರ ವಹಿಸಿಕೊಳ್ಳಬೇಕು ಎಂಬ ಬಗ್ಗೆ ಇಬ್ಬರು ಪಿಡಿಒಗಳ ನಡುವೆಯೇ ಪೈಪೋಟಿಗೆ ಸೃಷ್ಟಿಸಿದಂತಾಗಿತ್ತು.

ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

 

 

ವರ್ಗಾವಣೆ ಆದೇಶದ 35ನೇ ಕ್ರಮಾಂಕದಲ್ಲಿರುವ ಪ್ರತಿಭಾ ಅವರನ್ನು ಕೋಲಾರ ತಾಲೂಕಿನ ಮಾರ್ಜೇನಹಳ್ಳಿ ಗ್ರಾಮ ಪಂಚಾಯ್ತಿಯಿಂದ ಕುಣಿಗಲ್‌ ಗ್ರಾಮಾಂತರ ತಾಲೂಕಿನ ಕಿತ್ತಾಮಂಗಲ ಗ್ರಾಮ ಪಂಚಾಯ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

 

ಮೂಡಿಗೆರೆ ಪ್ರಾದೇಶಿಕ ವಲಯದಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ ಜಿ ಮೋಹನ್‌ ಕುಮಾರ್‍‌ ಅವರನ್ನು ಬೆಳ್ತಂಗಡಿ ಪ್ರಾದೇಶಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತ್ಯಾಗರಾಜು ಅವರ ಜಾಗಕ್ಕೆ ವರ್ಗಾಯಿಸಲು ಕೋರಿದೆ ಎಂದು 2023ರ ಜೂನ್‌ 14ರಂದು ಸಿದ್ದರಾಮಯ್ಯ ಅವರು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಈಶ್ವರ್‍‌ ಖಂಡ್ರೆ ಅವರಿಗೆ ಟಿಪ್ಪಣಿ ಹೊರಡಿಸಿದ್ದರು. ಈ ಟಿಪ್ಪಣಿ ಹೊರಡಿಸಿದ 15 ದಿನದೊಳಗೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಹೊನ್ನಾವರ ವಿಭಾಗ ಮತ್ತು ವಲಯದಲ್ಲಿ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಮ್‌ ಆರ್‍‌ ಎಂ ಅವರನ್ನು ವರ್ಗಾಯಿಸಬೇಕು ಎಂದು ಅರಣ್ಯ ಸಚಿವರಿಗೆ 2023ರ ಜೂನ್‌ 30ರಂದು ಸೂಚಿಸಿದ್ದರು.

 

ಸಿಎಂ ಕಚೇರಿಯಲ್ಲಿ ನಿಲ್ಲದ ವರ್ಗಾವಣೆ ಭರಾಟೆ; ಅರಣ್ಯಾಧಿಕಾರಿಯ ಒಂದೇ ಹುದ್ದೆಗೆ ಇಬ್ಬರಿಗೆ ಶಿಫಾರಸ್ಸು

 

ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆ ಪ್ರಕ್ರಿಯೆಗಳಲ್ಲಿ ಕಮಿಷನ್‌, ಲಂಚ ಪಡೆದು ವರ್ಗಾವಣೆ ವ್ಯಾಪಾರ ನಡೆಸಿದ್ದರೇ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿಗೆ ಸದನದಲ್ಲಿಯೇ ಸವಾಲು ಎಸೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾಗಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ಹುದ್ದೆಗೆ ಮೂರು ಬಾರಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದರು.  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮನಸೋ ಇಚ್ಛೆ ಅಧಿಕಾರಿ, ನೌಕರರ ವರ್ಗಾವಣೆಗಳನ್ನು ಮಾಡುತ್ತಿರುವುದರ ಬಗ್ಗೆ ಅಧಿಕಾರಿಶಾಹಿಯೊಳಗೆ ಅಸಮಾಧಾನಕ್ಕೆ ಕಾರಣವಾಗಿತ್ತು.

 

ಎಸ್‌ ಟಿ ಕಲ್ಯಾಣ ಇಲಾಖೆ ನಿರ್ದೇಶಕರ ಹುದ್ದೆ; ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳ ವರ್ಗಾವಣೆ

 

ಮಣಿಪುರ ಮೂಲದ ಕರ್ನಾಟಕ ಕೇಡರ್‍‌ನ (KN 2020) ಐಎಎಸ್‌ ಅಧಿಕಾರಿಯಾಗಿರುವ ನೋನ್‌ಜಾಯ್‌ ಮೊಹ್ಮದ್‌ ಅಲಿ ಅಕ್ರಮ್‌ ಶಾ ಅವರನ್ನು ಕಳೆದ 8 ತಿಂಗಳಲ್ಲಿ 6 ಬಾರಿ ವಿವಿಧ ಸ್ಥಳ-ಹುದ್ದೆಗಳಿಗೆ ವರ್ಗಾವಣೆ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.

 

8 ತಿಂಗಳಲ್ಲಿ 6 ಬಾರಿ ವರ್ಗಾವಣೆ; ಫುಟ್ಬಾಲ್‌ ಚೆಂಡಿನಂತಾದ ಮಣಿಪುರ ಮೂಲದ ಐಎಎಸ್‌ ಅಧಿಕಾರಿ ಅಕ್ರಮ್‌ ಶಾ

 

ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್‌ (ಕಿರಿಯ ಶ್ರೇಣಿ) ಅಧಿಕಾರಿಗಳನ್ನು ಯಾವುದೇ ಸಕಾರಣವಿಲ್ಲದೇ ಮತ್ತು ಅತಿ ವಿಶೇಷ ಸಂದರ್ಭವಿಲ್ಲದಿದ್ದರೂ ಅವಧಿಪೂರ್ವ ವರ್ಗಾವಣೆ ಮಾಡಿ ವರ್ಗಾವಣೆಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರಿಯಾಗಿದ್ದರು.

 

 

ಸಕಾರಣಗಳಿಲ್ಲದಿದ್ದರೂ ನಾಲ್ವರು ಕೆಎಎಸ್‌ ಅಧಿಕಾರಿಗಳ ಅವಧಿಪೂರ್ವ ವರ್ಗಾವಣೆ; ಮಾರ್ಗಸೂಚಿ ಉಲ್ಲಂಘನೆ!

 

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕಪರಿಶೋಧನಾಕಾರಿ ಒಂದು ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಅಧಿಕಾರಿಗಳಿಗೆ ಶಿಫಾರಸ್ಸು ಟಿಪ್ಪಣಿ ಹೊರಡಿಸಿದ್ದರು.

ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಮುಖ್ಯಮಂತ್ರಿ ಶಿಫಾರಸ್ಸು; ಪೈಪೋಟಿ ಸೃಷ್ಟಿಸಿದ ‘ಕೃಷ್ಣಾ’ದ ಟಿಪ್ಪಣಿಗಳು

 

ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿಯು ತೀವ್ರವಾಗಿ ಟೀಕಿಸಿದ್ದರು. ವರ್ಗಾವಣೆ ಹಿಂದೆ ಇರುವವರು ಯಾರು ಆ ಅತೀಂದ್ರ ಎಂದು ಟ್ವೀಟ್‌ ಕೂಡ ಮಾಡಿದ್ದರು.

‘ದಿ ಫೈಲ್‌’ ವರದಿ ಉಲ್ಲೇಖ; ‘ಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ, 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?

 

ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆಗೆ ಜೂನ್‌ 30 ಕಡೇ ದಿನ ಎಂದು ಹೇಳಿದ್ದ ಸರ್ಕಾರವು ಕಡೇ ಗಳಿಗೆಯಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಇದೇ ಜುಲೈ 3ರವರೆಗೂ ವಿಸ್ತರಿಸಿದ್ದರು.

ಸುತ್ತೋಲೆ ಉಲ್ಲಂಘಿಸಿ ಕೆಎಎಸ್‌, ಪಿಡಿಒ, ಅಬಕಾರಿ ನಿರೀಕ್ಷಕರು ಸೇರಿ 63 ಮಂದಿ ವರ್ಗಾವಣೆ

ಇದಾದ ನಂತರವೂ ವರ್ಗಾವಣೆ ಅಧಿಸೂಚನೆಗಳು ಹೊರಬಿದ್ದಿದ್ದವು. ವಿಶೇಷವೆಂದರೆ ಸರ್ಕಾರಿ ಜಮೀನನ್ನು ಮಾಜಿ ಸಚಿವ ಬಿ ಶ್ರೀರಾಮುಲು ಅವರಿಗೆ ಅಕ್ರಮವಾಗಿ ನೋಂದಣಿ ಮಾಡಿಕೊಡಲು ಸುಳ್ಳು ದಾಖಲೆಗಳನ್ನೇ ನೈಜವೆಂದು ನಂಬಿಸಿದ ಆರೋಪದ ಮೇರೆಗೆ ವಿಚಾರಣೆ ಎದುರಿಸಿದ್ದ ಶಶಿಧರ ಬಗಲಿ ಅವರನ್ನು ವಿಶೇಷ ಭೂಸ್ವಾಧೀನಾಧಿಕಾರಿಯನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆಗೊಳಿಸಿ ಅಧಿಸೂಚನೆ ಹೊರಡಿಸಿದ್ದರು.

ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನನ್ನೂ ಸೇರಿಸಿ ನೋಂದಾಯಿಸಿದ್ದ ಅಧಿಕಾರಿಗೆ ಭೂಸ್ವಾಧೀನಾಧಿಕಾರಿ ಹುದ್ದೆ

ಇದಷ್ಟೇ ಅಲ್ಲ, ಎಪಿಪಿಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ದೋಷಾರೋಪಣೆ ಪಟ್ಟಿಯಲ್ಲಿ  2ನೇ ಆರೋಪಿ ಎಂದು ಹೆಸರಿಸಿದ್ದ ನಾರಾಯಣಸ್ವಾಮಿ ಅವರನ್ನು ಅಭಿಯೋಜನಾ ಇಲಾಖೆಯ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು.

ಎಪಿಪಿಗಳ ಅಕ್ರಮ ನೇಮಕದಲ್ಲಿ ಭಾಗಿಯಾಗಿದ್ದ 2ನೇ ಆರೋಪಿ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ

ಹಾಗೆಯೇ ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಅಭಿವೃದ್ಧಿಪಡಿಸಲಾಗಿದ್ದ ತಂತ್ರಾಂಶವನ್ನೇ ದುರುಪಯೋಗಪಡಿಸಿಕೊಂಡಿದ್ದ ಆರೋಪವೂ ಕೇಳಿ ಬಂದಿತ್ತು.

ಲಂಚ; ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್‌ ಮಾಡಿ ತಂತ್ರಾಂಶ ದುರುಪಯೋಗಪಡಿಸಿಕೊಂಡ ಅಧಿಕಾರಿಗಳು?

ಕಾಸಿಗಾಗಿ ಪೋಸ್ಟಿಂಗ್‌ ಎಂಬ ಆರೋಪ ಕೇಳಿ ಬಂದಿದ್ದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ ಎಸ್ ಪ್ರಹ್ಲಾದ್‌ ಎಂಬುವರನ್ನು ಬಿಬಿಎಂಪಿಯಲ್ಲಿನ ಮುಖ್ಯ ಇಂಜಿನಿಯರ್‌ ಹುದ್ದೆಗೆ ವರ್ಗಾವಣೆ ಮಾಡಲು ಟಿಪ್ಪಣಿ ಹೊರಡಿಸಿದ್ದರು.

ಕಾಸಿಗಾಗಿ ಪೋಸ್ಟಿಂಗ್‌ ಆರೋಪ ಬೆನ್ನಲ್ಲೇ ಎಸಿಬಿ ದಾಳಿಗೊಳಗಾಗಿದ್ದ ಮುಖ್ಯಇಂಜಿನಿಯರ್‍‌ಗೆ ಹೊಸ ಹುದ್ದೆ

ಇದಷ್ಟೇ ಅಲ್ಲ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕೂಡ ಆಯಕಟ್ಟಿನ ಹುದ್ದೆಗೆ ಕೆ ಟಿ ನಾಗರಾಜ್‌ ಅವರನ್ನು ನೇಮಿಸಿದ್ದರ ಬಗ್ಗೆಯೂ ಆರೋಪಗಳು ಕೇಳಿ ಬಂದಿದ್ದವು.

ಆದಾಯಕ್ಕಿಂತ ಶೇ. 207.11ರಷ್ಟು ಹೆಚ್ಚು ಆಸ್ತಿ ಹೊಂದಿರುವ ಆರೋಪಿತ ಅಧಿಕಾರಿ, ಡಿಕೆಶಿಗೆ ತಾಂತ್ರಿಕ ಸಲಹೆಗಾರ

47 ಕೋಟಿ ರು. ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದ ಆರೋಪಿತ ಅಧಿಕಾರಿಗೆ ಸಾರ್ವಜನಿಕ ಆರೋಗ್ಯ ತರಬೇತಿ ಸಂಸ್ಥೆಯ ನಿರ್ದೇಶಕರ ಹುದ್ದೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ವರ್ಗಾಯಿಸಿದ್ದರು.

47 ಕೋಟಿ ನಷ್ಟ; ಆರೋಪಿತ ಅಧಿಕಾರಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಯಲ್ಲಿ ತರಬೇತಿ ಅಧಿಕಾರಿ ಹುದ್ದೆ

 

ವರ್ಗಾವಣೆ ಪ್ರಕ್ರಿಯೆಯಲ್ಲಿ ಯಾವುದೇ ವ್ಯಾಪಾರವಾಗಲೀ, ದಂಧೆಯನ್ನಾಗಲಿ ನಡೆದಿಲ್ಲ ಮತ್ತು ಇದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.

the fil favicon

SUPPORT THE FILE

Latest News

Related Posts