ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆಗಳಿಗೆ ಬಿರುಸಿನ ಚಾಲನೆ ದೊರೆತಿದೆ. ರಾಜಕಾರಣಿಗಳ ಮನೆ ಕದ ತಟ್ಟುತ್ತಿರುವ ಕಲಾವಿದರು, ಟಿಪ್ಪಣಿಗಳನ್ನು ಹಾಕಿಸಿಕೊಂಡು ವಿಧಾನಸೌಧಕ್ಕೆ ಎಡತಾಕಿ ಲಾಬಿ ನಡೆಸುತ್ತಿದ್ದಾರೆ.
ಕರ್ನಾಟಕ ಲಲಿತಾ ಕಲಾ ಅಕಾಡೆಮಿಯ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಲವು ಕಲಾವಿದರು ಮುಖ್ಯಮಂತ್ರಿ ಕಚೇರಿಗೆ ಮನವಿ, ಶಿಫಾರಸ್ಸು ಪತ್ರಗಳನ್ನು ರವಾನಿಸಿದ್ದಾರೆ. ಚುನಾಯಿತ ಜನಪ್ರತಿನಿಧಿಗಳು, ಲೋಕಸಭೆಯ ಮಾಜಿ, ಹಾಲಿ ಸಂಸದರು, ಚಿತ್ರಕಲಾ ಪರಿಷತ್‌ನ ಅಧ್ಯಕ್ಷರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ.
ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ, ವಿಧಾನಪರಿಷತ್‌ನ ಮಾಜಿ ಸಭಾಪತಿ, ಮಾಜಿ ಸಚಿವ ಹಾಗೂ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಡಾ ಬಿ ಎಲ್ ಶಂಕರ್ ಅವರು ಡಾ ಬಾಬುರಾವ್ ನಡೋಣಿ ಅವರನ್ನು ನೇಮಿಸಬೇಕು ಎಂದು ಮುಖ್ಯಮಂತ್ರಿಗೆ ಪತ್ರವೊಂದನ್ನು ಬರೆದಿದ್ದಾರೆ.
ಈ ಪತ್ರವನ್ನಾಧರಿಸಿ ಮುಖ್ಯಮಂತ್ರಿಗಳ ಕಚೇರಿಯು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರಿಗೆ ಟಿಪ್ಪಣಿ ಹೊರಡಿಸಿದೆ. ಈ ಪತ್ರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.
ಡಾ ಬಾಬುರಾವ್ ನಡೋಣಿ ಅವರು ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾ ಹಾಗೂ ಶಿಲ್ಪ ಕಲಾವಿದರು. ರಾಯಭಾಗದ ವಿವೇಕಾನಂದ ಕಾಲೇಜ್ ಆಫ್ ಫೈನ್ ಆರ್ಟ್ಸ್‌ನ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಇವರನ್ನು ಲಲಿತಾಕಲಾ ಅಕಾಡೆಮಿಗೆ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಂಬಂಧ ಪರಿಶೀಲಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶಿಸಿದ್ದಾರೆ ಎಂದು ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಡಾ ವೆಂಕಟೇಶಯ್ಯ ಅವರು 2023ರ ಅಕ್ಟೊಬರ್ 19ರಂದು ಟಿಪ್ಪಣಿ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಅಕಾಡೆಮಿಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರ ಚಿಂತಿಸಿದೆ. ಈ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಈಗ ಸಚಿವರು, ಶಾಸಕರ ಆಪ್ತರ ಮುಖೇನ ನೇಮಕಕ್ಕೆ ಶಿಫಾರಸು ಮಾಡುವಂತೆ ದುಂಬಾಲು ಬೀಳುತ್ತಿದ್ದಾರೆ.
ಇನ್ನೊಂದೆಡೆ ಮುಖ್ಯಮಂತ್ರಿಗಳ ಆಪ್ತರು ತಮ್ಮ ಭಾಗದ ಕಲಾವಿದರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಒತ್ತಡ ಹೇರಲಾರಂಭಿಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಉತ್ತರ ಕರ್ನಾಟಕದ ಅನೇಕ ಆಕಾಂಕ್ಷಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರ ಮೇಲೆ ಒತ್ತಡ ಹೇರುತ್ತಿರುವುದು ತಿಳಿದು ಬಂದಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಈ ಹಿಂದಿನ ಅಧ್ಯಕ್ಷರ ಕಾಲಾವಧಿ ಕೊನೆಗೊಂಡಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆಗಬೇಕಿತ್ತು.
ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಮತ್ತು ಕರ್ನಾಟಕ ಜಾನಪದ ಅಕಾಡೆಮಿಗಳಿಗೆ ಅಧಕ್ಷರ ನೇಮಕಕ್ಕೂ ಶಿಫಾರಸ್ಸು ಪತ್ರಗಳು ಸಲ್ಲಿಕೆಯಾಗಿವೆ.