ಬೆಂಗಳೂರು; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಆಯವ್ಯಯದಲ್ಲಿ ಒದಗಿಸಿದ್ದ 2,101.20 ಕೋಟಿ ರು. ಪೈಕಿ ಅಕ್ಟೋಬರ್ ಅಂತ್ಯಕ್ಕೆ ಕೇವಲ 421.60 ಕೋಟಿಯಷ್ಟೇ ಬಿಡುಗಡೆಯಾಗಿದೆ. ಅಲ್ಲದೇ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳಿಗೆ ಆಯವ್ಯಯದಲ್ಲಿ ಅನುದಾನ ಒದಗಿಸಿದೆಯಾದರೂ ಅತ್ಯಂತ ಕನಿಷ್ಠ ಪ್ರಮಾಣದಲ್ಲಿ ಬಿಡುಗಡೆ ಮಾಡಿದೆ.
ಮುಸ್ಲಿಂ ಸಮುದಾಯಕ್ಕೆ ನೀಡಲಾಗುವ ಅನುದಾನದ ಮೊತ್ತವನ್ನು 4 ರಿಂದ 10 ಸಾವಿರ ಕೋಟಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಭರವಸೆಗೆ ಸದನದ ಒಳಗೆ ಮತ್ತು ಹೊರಗೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು.ಇದರ ಬೆನ್ನಲ್ಲೇ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಆಯವ್ಯದಲ್ಲಿ ಘೋಷಣೆ, ಹಂಚಿಕೆ, ಬಿಡುಗಡೆ ಮತ್ತು ವೆಚ್ಚವಾಗಿರುವ ಅಂಕಿ ಅಂಶಗಳು ಮುನ್ನೆಲೆಗೆ ಬಂದಿವೆ.
2023ರ ನವೆಂಬರ್ 18ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಇಲಾಖಾ ಮುಖ್ಯಸ್ಥರು ಆಯವ್ಯಯ ವಾಸ್ತವಿಕ ಬಿಡುಗಡೆ, ವೆಚ್ಚದ ವಿವರಗಳನ್ನು ಮುಂದಿರಿಸಿದ್ದರು. ಈ ಅಂಕಿ ಅಂಶಗಳು ‘ದಿ ಫೈಲ್’ಗೆ ಲಭ್ಯವಾಗಿವೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದ ಪೈಕಿ ಬಿಡಿಗಾಸನ್ನೂ ಒದಗಿಸಿಲ್ಲ. ಇಲಾಖಾವಾರು ಫಲಾನುಭವಿ ಆಧರಿತ ಕಾರ್ಯಕ್ರಮಗಳಲ್ಲೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅತ್ಯಂತ ಕನಿಷ್ಠ ಪ್ರಮಾಣದ ಅನುದಾನ ಬಿಡುಗಡೆಯಾಗಿರುವುದು ತಿಳಿದು ಬಂದಿದೆ.
ಆಯವ್ಯಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಒಟ್ಟಾರೆ 2,101.20 ಕೋಟಿ ರು. ಅನುದಾನ ಒದಗಿಸಿದೆ. ಈ ಪೈಕಿ ಅಕ್ಟೋಬರ್ ಅಂತ್ಯಕ್ಕೆ 421.06 ಕೋಟಿಯಷ್ಟೇ ಬಿಡುಗಡೆಯಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ.20ರಷ್ಟು ಮಾತ್ರ ಬಿಡುಗಡೆಯಾದಂತಾಗಿದೆ. ಇದರಲ್ಲಿ 303.58 ಕೋಟಿ ರು. ಖರ್ಚಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ರಾಜ್ಯ ಸರ್ಕಾರವು 83.00 ಕೋಟಿ ರು.ಗಳನ್ನು ಆಯವ್ಯಯದಲ್ಲಿ ಅನುದಾನ ಒದಗಿಸಿಕೊಂಡಿದೆ. ಕೇಂದ್ರ ಸರ್ಕಾರವು 100 ಕೋಟಿ ರು. ಒದಗಿಸಿದೆ. ಒಟ್ಟಾರೆ 183 ಕೋಟಿ ರು. ಅನುದಾನವಿದ್ದರೂ ಅಕ್ಟೋಬರ್ ಅಂತ್ಯಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಬಿಡಿಗಾಸೂ ಬಿಡುಗಡೆ ಮಾಡಿಲ್ಲ ಎಂಬುದು ಅಂಕಿ ಅಂಶದಿಂದ ತಿಳಿದು ಬಂದಿದೆ.
ಅದೇ ರೀತಿ ಇದೇ ಇಲಾಖೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಜನವಿಕಾಸ ಕಾರ್ಯಕ್ರಮಕ್ಕೂ ರಾಜ್ಯದಿಂದ 83 ಕೋಟಿ ರು., ಕೇಂದ್ರದಿಂದಲೂ 100 ಕೋಟಿ ರು. ಅನುದಾನ ಒದಗಿಸಿತ್ತು. ಅಕ್ಟೋಬರ್ ಅಂತ್ಯಕ್ಕೆ ನಯಾಪೈಸೆಯನ್ನೂ ನೀಡದೇ ಶೂನ್ಯ ಸಂಪಾದನೆ ಮಾಡಿದೆ.
ಇಲಾಖಾವಾರು ಫಲಾನುಭವಿ ಆಧರಿತ ಯೋಜನೆಗಳಲ್ಲಿಯೂ ಇದೇ ಸ್ಥಿತಿ ಇದೆ. ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗಾಗಿ ಆಯವ್ಯಯದಲ್ಲಿ 160 ಕೋಟಿ ರು. ಅನುದಾನ ಒದಗಿಸಿದೆ. ಅಕ್ಟೋಬರ್ ಅಂತ್ಯಕ್ಕೆ ಕೇವಲ 2.29 ಕೋಟಿ ರು ಮಾತ್ರ ಬಿಡುಗಡೆ ಮಾಡಿದೆ. ಇದರಲ್ಲಿ 0.10 ಕೋಟಿ ರು. ಮಾತ್ರ ವೆಚ್ಚವಾಗಿದೆ.
ಇದೇ ಇಲಾಖೆ ವ್ಯಾಪ್ತಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗೆಂದು 110 ಕೋಟಿ ರು.ಗಳನ್ನು ಆಯವ್ಯಯದಲ್ಲಿ ಒದಗಿಸಿಕೊಂಡಿದೆಯಾದರೂ ಅಕ್ಟೋಬರ್ ಅಂತ್ಯಕ್ಕೆ ಕೇವಲ 1.00 ಕೋಟಿ ರು ಮಾತ್ರ ಬಿಡುಗಡೆ ಮಾಡಿದೆ.
ಅಲ್ಪಸಂಖ್ಯಾತರ ಸಮುದಾಯದ ಎಂ ಫಿಲ್, ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಸಹಾಯ ಧನ ಒದಗಿಸಲು 6.0 ಕೋಟಿ ರು. ಆಯವ್ಯಯದಲ್ಲಿ ಒದಗಿಸಿಕೊಂಡಿದೆ. ಅಕ್ಟೋಬರ್ ಅಂತ್ಯಕ್ಕೆ 2.33 ಕೋಟಿ ರ. ಮಾತ್ರ ವೆಚ್ಚವಾಗಿದೆ. ಶುಲ್ಕ ಮರು ಪಾವತಿಗೆ ಸಂಬಂಧಿಸಿದಂತೆ 25 00 ಕೋಟಿ ರು. ಆಯವ್ಯಯದಲ್ಲಿ ಒದಗಿಸಿಕೊಂಡಿದೆಯಾದರೂ ಅಕ್ಟೋಬರ್ ಅಂತ್ಯಕ್ಕೆ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ. 18,000 ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲು ವಾರ್ಷಿಕ ಗುರಿ ನೀಡಲಾಗಿತ್ತು. ಆದರೀಗ 6 ತಿಂಗಳು ಕಳೆದರೂ ಬಿಡಿಗಾಸನ್ನೂ ನೀಡದಿರುವುದು ಇಷ್ಟೂ ಸಂಖ್ಯೆಯ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಯಾಗಿಲ್ಲ.
ಇನ್ನು ಮೌಲಾನಾ ಆಜಾದ್ ಶಾಲೆ ಕಾಲೇಜು ನಿರ್ವಹಣೆ ಮತ್ತು ನೂತನ ಹಾಸ್ಟೆಲ್‌ಗಳಿಗೆಂದು 68.29 ಕೋಟಿ ರು. ಒದಗಿಸಿದೆ. ಇದರಲ್ಲಿ 43.55 ಕೋಟಿ ರು.ಬಿಡುಗಡೆ ಮಾಡಿದೆ. ಇದರಲ್ಲಿ 35.38 ಕೋಟಿ ರು. ವೆಚ್ಚವಾಗಿದೆ. ವಿದ್ಯಾರ್ಥಿನಿಲಯಗಳು ಮತ್ತು ವಸತಿ ಶಾಲೆಗಳ ನಿರ್ವಹಣೆಗೆ 347.89 ಕೋಟಿ ರು. ಅನುದಾನ ಲಭ್ಯವಾಗಿಸಿಕೊಂಡಿದೆ. ಇದರಲ್ಲಿ ಅಕ್ಟೋಬರ್ ಅಂತ್ಯಕ್ಕೆ 181.42 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಈ ಪೈಕಿ 123.12 ಕೋಟಿ ರು ವೆಚ್ಚ ಮಾಡಿದೆ.
ಶ್ರಮ ಶಕ್ತಿ ಸಾಲ ಯೋಜನೆ (ವೈಯಕ್ತಿಕ) ಯಡಿ 1,000 ವ್ಯಕ್ತಿಗಳಿಗೆ ಆರ್ಥಿಕ ನೆರವು ನೀಡಲು 5.00 ಕೋಟಿ ರು. ನೀಡಿದೆ. ಆದರೆ ಬಿಡಿಗಾಸೂ ನೀಡಿಲ್ಲ. ಆದರೆ 11.01 ಕೋಟಿ ವೆಚ್ಚವಾಗಿದೆ ಎಂದು ತೋರಿಸಿರುವುದು ಗೊತ್ತಾಗಿದೆ.