ಗ್ಯಾರಂಟಿಗಳನ್ನು ಜನ ಮೆಚ್ಚಿದ್ದರೇ ಸಮೀಕ್ಷೆಯೇಕೆ?; ‘ದಿ ಫೈಲ್‌’ ವರದಿ ಹಂಚಿಕೊಂಡು ಪ್ರಶ್ನಿಸಿದ ಪ್ರತಿಪಕ್ಷ ನಾಯಕ

ಬೆಂಗಳೂರು; ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ಮುಂದಿನ ಮೂರು ದಿನದೊಳಗೇ ಪೂರ್ಣಗೊಳಿಸಬೇಕು ಎಂದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಒತ್ತಡ ಹೇರಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಪ್ರತಿಪಕ್ಷ ಆರ್‍‌ ಅಶೋಕ್‌ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಈ ಕುರಿತು ‘ದಿ ಫೈಲ್‌’ ದಾಖಲೆ ಸಹಿತ ಪ್ರಕಟಿಸಿದ್ದ ವರದಿಯನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರೈತರ ಆತ್ಮಹತ್ಯೆ, ನೇಕಾರರು, ಮೀನುಗಾರರು, ಗುಳೆ ಕಾರ್ಮಿಕರು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇನ್ನಿತರೆ ವಿಚಾರಗಳ ಕುರಿತು ಸಮೀಕ್ಷೆ ನಡೆಸದೇ ಗ್ಯಾರಂಟಿಗಳ ಸಮೀಕ್ಷೆ ನಡೆಸಲೇಕೆ ಅಷ್ಟೊಂದು ಆತುರ, ಆಸಕ್ತಿ ಎಂದು ಎಕ್ಸ್‌ ನಲ್ಲಿ ಪ್ರಶ್ನಿಸಿದ್ದಾರೆ.

 

ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರು, ನೇಕಾರರು, ಮೀನುಗಾರರ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ.  ಹೊಟ್ಟೆಪಾಡಿಗಾಗಿ ಗುಳೆ ಹೋಗಿರುವ ಲಕ್ಷಾಂತರ ಕೃಷಿ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಆದರೆ ನೂರಾರು ಕೋಟಿ ಖರ್ಚು ಮಾಡಿ ಒಂದಲ್ಲ ಹತ್ತಾರು ಮೂಲಗಳಿಂದ ಗ್ಯಾರಂಟಿಗಳ ಬಗ್ಗೆ ಸಮೀಕ್ಷೆ ಮಾಡಿಸಲು ಸಿಎಂ ಸಿದ್ದರಾಮಯ್ಯನವರಿಗೆ   ಎಲ್ಲಿಲ್ಲದ ಆಸಕ್ತಿ, ಆತುರ. ಕಳೆದ 9 ತಿಂಗಳಿಂದ ರಾಜ್ಯವನ್ನು ಅಭಿವೃದ್ಧಿ ಶೂನ್ಯ ಮಾಡಿರುವ ಕಾಂಗ್ರೆಸ್‌   ಸರ್ಕಾರ, ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮುಖ ತೋರಿಸಲು ಹೇಗಾದರೂ ಮಾಡಿ ಗ್ಯಾರೆಂಟಿ ಯೋಜನೆಗಳ ಬಗ್ಗೆ ಸರ್ಟಿಫಿಕೇಟ್ ಪಡೆಯಬೇಕೆಂದು ಹಠಕ್ಕೆ ಬಿದ್ದಿದೆ ಎಂದು ಎಕ್ಸ್‌ ಖಾತೆಯಲ್ಲಿ ಕುಟುಕಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಗ್ಯಾರಂಟಿ  ಯೋಜನೆಗಳು ನಿಜವಾಗಿಯೂ ಜನರಿಗೆ ತಲುಪಿದ್ದರೆ, ಅದನ್ನು ಜನ ಮೆಚ್ಚಿದ್ದರೆ ಈ ಸಮೀಕ್ಷೆ ನಡೆಸುವ ಅಗತ್ಯ ಏನಿದೆ? ಯಾವುದೇ ಯೋಜನೆ ಜನರ ಬದುಕಿನ ಮೇಲೆ ಬೀರಿರುವ ಪರಿಣಾಮ, ಯೋಜನೆಯ ಪೂರ್ವದಲ್ಲಿ, ಯೋಜನೆಯ ನಂತರದಲ್ಲಿ ಅದು ಜನರ ಬದುಕಿನಲ್ಲಿ ತಂದಿರುವ ಬದಲಾವಣೆ ಬಗ್ಗೆ ವೈಜ್ಞಾನಿಕ ಅಧ್ಯಯನ ಮಾಡಬೇಕಾದರೆ ಅದಕ್ಕೆ ಕನಿಷ್ಠ 6 ತಿಂಗಳಾದರೂ ಸಮಯ ಬೇಕು. ಎಲ್ಲಕ್ಕಿಂತ ಮಿಗಿಲಾಗಿ ಯೋಜನೆ ಜಾರಿಯಾಗಿ ಒಂದು ವರ್ಷವಾದರೂ ಕಳೆದಿರಬೇಕು. ಅದು ಬಿಟ್ಟು ಹೀಗೆ ತರಾತುರಿಯಲ್ಲಿ ಹೀಗೆ ಮೂರು ದಿನಗಳಲ್ಲಿ ಸಮೀಕ್ಷೆ ಮಾಡಲು ಹೇಗೆ ಸಾಧ್ಯ ಎಂದೂ ಪ್ರಶ್ನಿಸಿದ್ದಾರೆ.

 

ಗ್ಯಾರಂಟಿ ಜಾರಿ ಬಗ್ಗೆ ಖಾಸಗಿ ಸಂಸ್ಥೆಯಿಂದ ಸಮೀಕ್ಷೆ ಮಾಡಿಸಲು ಈಗಾಗಲೇ 1 ಕೋಟಿ ರೂಪಾಯಿ ಪೋಲು ಮಾಡಿದ್ದಾಯ್ತು. ಗ್ಯಾರಂಟಿ ಅನುಷ್ಠಾನಕ್ಕೆ ಸಮಿತಿ ರಚಿಸಿ, ಸಿಕ್ಕಸಿಕ್ಕವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ 16 ಕೋಟಿ ರೂಪಾಯಿ ದುಂದು ವೆಚ್ಚ ಮಾಡಿದ್ದಾಯ್ತು. 1.2 ಲಕ್ಷ ‘ಗ್ಯಾರೆಂಟಿ ಸ್ವಯಂ ಸೇವಕರ’ ಹುದ್ದೆ ಸೃಷ್ಟಿಸುವ ಮೂಲಕ 12 ಕೋಟಿ ರೂಪಾಯಿ ವ್ಯರ್ಥ ಮಾಡಿದ್ದಾಯ್ತು. ಈಗ ಮತ್ತೆ ಈ ಮೂರು ದಿನಗಳ ಸಮೀಕ್ಷೆ ಯಾವ ಪುರುಷಾರ್ಥಕ್ಕಾಗಿ? ಇದರಿಂದ ಸಾಧಿಸಲು ಹೊರಟಿರುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

 

ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ತ್ವರಿತಗತಿಯಲ್ಲಿ  ಪೂರ್ಣಗೊಳಿಸಬೇಕು ಎಂದು    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ತೀವ್ರ ಒತ್ತಡ ಹೇರಿದ್ದಾರೆ. ಇದರ ಮಧ್ಯೆ ಅಭಿವೃದ್ಧಿ ಆಯುಕ್ತರು ಸಹ ಮುಂದಿನ ಮೂರು ದಿನದೊಳಗೇ ಸಮೀಕ್ಷೆಯನ್ನು ತ್ವರಿತಗೊಳಿಸಬೇಕು ಎಂದು ನಿರ್ದೇಶಿಸಿದ್ದರು.

ಗ್ಯಾರಂಟಿ ಸಮೀಕ್ಷೆ; 3 ದಿನದೊಳಗೇ ಪೂರ್ಣಗೊಳಿಸಲು ತೀವ್ರ ಒತ್ತಡ, ಕಾರ್ಯಕರ್ತೆಯರ ಕೆಂಗಣ್ಣು

 

 

 

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಸಮೀಕ್ಷೆಗೆ ರಾಜ್ಯ ಸರ್ಕಾರವು  12 ಕೋಟಿ ರು. ವೆಚ್ಚ ಮಾಡಲಿದೆ.

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ 12 ಕೋಟಿ; ದುಂದುವೆಚ್ಚಕ್ಕೆ ದಾರಿ

 

ಎಂ2ಎಂ ಮಾಧ್ಯಮ ಸಂಸ್ಥೆಗೆ ಸಮೀಕ್ಷೆ ನಡೆಸಲು 1 ಕೋಟಿ ರು, ಮುಂಬೈ ಮೂಲದ ಎಕ್ಸ್‌ ಕೆಡಿಆರ್‍‌ ಸಂಸ್ಥೆಗೆ ಅಧ್ಯಯನದ ಹೆಸರಿನಲ್ಲಿ 1.03 ಕೋಟಿ ರು.ಗಳನ್ನು ನೀಡಿದೆ. ಈ ಎರಡೂ ಸಂಸ್ಥೆಗಳು ಈಗಾಗಲೇ ಮುಂಗಡ ಹಣ ಪಡೆದು ಸಮೀಕ್ಷೆ ಕಾರ್ಯವನ್ನೂ ಕೈಗೆತ್ತಿಕೊಂಡಿದೆ. ಈ ಎರಡೂ ಖಾಸಗಿ ಸಂಸ್ಥೆಗಳು ಈಗಾಗಲೇ ಸಮೀಕ್ಷೆ ಮತ್ತು ಅಧ್ಯಯನ ನಡೆಸುತ್ತಿರುವಾಗಲೇ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ನಡೆಸಲಿರುವ  ಸಮೀಕ್ಷೆಗೆ 12 ಕೋಟಿ ರು ವೆಚ್ಚ ಮಾಡುತ್ತಿರುವುದು ದುಂದುವೆಚ್ಚಕ್ಕೆ ದಾರಿಮಾಡಿಕೊಟ್ಟಂತಾಗಿತ್ತು.

 

 

ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ ವರ್ಕ್‌ ಕಂಪನಿಗೆ  4(ಜಿ) ವಿನಾಯಿತಿ ನೀಡುವ ಮುನ್ನ ಆರ್ಥಿಕ ಇಲಾಖೆಯ ಅಧಿಕಾರಿಗಳು  ಆಡಳಿತಾತ್ಮಕ  ಪ್ರಕ್ರಿಯೆಗಳನ್ನೇ ನಡೆಸಿರಲಿಲ್ಲ.

ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)

 

2023ರ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬರಲಿದೆ ಎಂದು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯ ಈದಿನ.ಕಾಮ್‌ ವೆಬ್‌ಸೈಟ್‌ ಚುನಾವಣೆ ಪೂರ್ವ ಸಮೀಕ್ಷೆ ಹೇಳಿತ್ತು. ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಿದ ಎರಡೇ ಎರಡು ತಿಂಗಳಲ್ಲಿ ಇದೇ ಕಂಪನಿಗೇ 58 ಸಾವಿರ ಕೋಟಿ ರು. ವೆಚ್ಚದ ಗ್ಯಾರಂಟಿಗಳ ಸಮೀಕ್ಷೆ ನಡೆಸಲು 1 ಕೋಟಿ ರು. ನೀಡಿದ್ದು  ಚರ್ಚೆಗೆ ಗ್ರಾಸವಾಗಿತ್ತು.

ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ

 

ಗ್ಯಾರಂಟಿಗಳ ಕುರಿತಾಗಿ ಐಸೆಕ್‌, ಮೌಲ್ಯಮಾಪನ ಪ್ರಾಧಿಕಾರಗಳಿಂದ ಸಮೀಕ್ಷೆ ನಡೆಸಬೇಕಿತ್ತು ಎಂದು ಪ್ರತಿಪಾದಿಸಿರುವ ಹಲವು ಅಧಿಕಾರಿಗಳು, ಕೇವಲ ಪ್ರಕಾಶನ, ಮುದ್ರಣದಂತಹ ಸೇವೆಗಳನ್ನು ಒದಗಿಸುತ್ತಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ವಹಿಸಿರುವುದಕ್ಕೆ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರು.

 

ಸರ್ವೆ ಕಾರ್ಯಕ್ಕೆ ಸರ್ಕಾರದ ಬೆನ್ನು ಬಿದ್ದಿದ್ದ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿ; ದಾಖಲೆ ಬಹಿರಂಗ

 

ಗ್ಯಾರಂಟಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ಜೂನ್‌, ಜುಲೈವರೆಗೂ ಚಾಲ್ತಿಯಲ್ಲಿದ್ದವು. ಇದಾದ ನಂತರವೂ ಯೋಜನೆ ಅನುಷ್ಠಾನದಲ್ಲಿ ಗೊಂದಲ ಮುಂದುವರೆದಿತ್ತು. ಬಹುತೇಕ ಫಲಾನುಭವಿಗಳಿಗೆ ಹಣವೂ ಇದುದವರೆಗೂ ಪಾವತಿಯಾಗಿಲ್ಲ.  ಮಾರ್ಗಸೂಚಿಗಳ ಸಂಬಂಧ ಆಗಸ್ಟ್‌ವರೆಗೂ ತಿದ್ದುಪಡಿಗಳು ಮುಂದುವರೆದಿದ್ದವು. ಕೆಎಸ್‌ಆರ್‍‌ಟಿಸಿಯು 20 ಲಕ್ಷ ರು.ಗಳನ್ನು ನೀಡಿದ್ದರೂ ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನೇ ಒದಗಿಸಿರಲಿಲ್ಲ.

ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ

 

ಅಲ್ಲದೇ ಬೆಸ್ಕಾಂ ಕೂಡ  ಸಮಗ್ರ ಕಡತವನ್ನೇ ಮುಚ್ಚಿಟ್ಟಿತ್ತು.

 

ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ

 

 

ಅದೇ ರೀತಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಹ ಎಂ2ಎಂ ಕಂಪನಿಯೊಂದಿಗೆ ಎಂಒಯು ಸೇರಿ ಹಲವು ದಾಖಲೆಗಳೇ ಲಭ್ಯವಿಲ್ಲ ಎಂದು ಆರ್‍‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿತ್ತು.

 

 

ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ

 

ಇದರ ನಡುವೆಯೇ ಸರ್ಕಾರವು ಗ್ಯಾರಂಟಿಗಳನ್ನು ಅಧ್ಯಯನ ನಡೆಸಲು ಮುಂಬೈ ಮೂಲದ ಸಂಸ್ಥೆಗೆ 1.03 ಕೋಟಿ ರು. ವೆಚ್ಚ ಮಾಡಲು 4(ಜಿ) ವಿನಾಯಿತಿ ನೀಡಿತ್ತು.

 

ಗ್ಯಾರಂಟಿ ಸಮೀಕ್ಷೆ, ಅನುಷ್ಠಾನ ಸಮಿತಿ ರಚನೆ ಬೆನ್ನಲ್ಲೇ ಈಗ ಅಧ್ಯಯನ; ಮುಂಬೈ ಸಂಸ್ಥೆಗೆ 1.03 ಕೋಟಿ ರು ನೀಡಿಕೆ

ಗ್ಯಾರಂಟಿ ಯೋಜನೆಗಳನ್ನು  ಏಕಕಾಲಕ್ಕೆ ಐದಾರು ಸಮಿತಿಗಳು ಸಮೀಕ್ಷೆ ನಡೆಸುತ್ತಿರುವುದು ಮತ್ತು ಇದಕ್ಕಾಗಿ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.

the fil favicon

SUPPORT THE FILE

Latest News

Related Posts