ಬೆಂಗಳೂರು; ಗ್ಯಾರಂಟಿ ಯೋಜನೆಗಳ ಮಾಹಿತಿಯೂ ಸೇರಿದಂತೆ ಬಿಬಿಎಂಪಿ, ಬಿಡಿಎ, ಬಿಎಂಆರ್‍ಸಿಎಲ್, ಬಿಎಂಆರ್‍ಡಿಎ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಯೋಜನೆಗಳನ್ನು ಸಾಮಾಜಿಕ ಜಾಲ ತಾಣ, ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಚಾರ ಮಾಡಲು ತಂಡವೊಂದನ್ನು ರಚಿಸಲಿದೆ. ಇದಕ್ಕಾಗಿ ತಿಂಗಳಿಗೆ 60 ಲಕ್ಷ ರು.ನಂತೆ ವರ್ಷಕ್ಕೆ 7 ಕೋಟಿ ರು. ವೆಚ್ಚ ಮಾಡಲು ಸರ್ಕಾರವು ಮುಂದಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಹಾಸಿಗೆ, ದಿಂಬು, ಮಂಚ ಸೇರಿದಂತೆ ಇನ್ನಿತರೆ ಪರಿಕರಗಳನ್ನು ಒದಗಿಸಲು ಅನುದಾನ ಕೊರತೆ ಇದೆ ಎಂದು ಹೇಳಿರುವ ನಡುವೆಯೇ ಗ್ಯಾರಂಟಿ, ಬಿಬಿಎಂಪಿ, ಬಿಡಿಎ, ಬಿಎಂಆರ್‍ಸಿಎಲ್, ಬಿಎಂಆರ್‍ಡಿಎ, ಬಿಡಬ್ಲ್ಯೂಎಸ್‌ಎಸ್‌ಬಿ ಯೋಜನೆಗಳ ಪ್ರಚಾರಕ್ಕೂ 7 ಕೋಟಿ ರು ವೆಚ್ಚ ಮಾಡಲಿರುವುದು ಚರ್ಚೆಗೆ ಗ್ರಾಸವಾಗಿದೆ.
ಈ ಸಂಬಂಧ 2024ರ ನವೆಂಬರ್ 22ರಂದು ಆರ್ಥಿಕ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಇದರ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.
ಅಧಿಸೂಚನೆಯಲ್ಲೇನಿದೆ?
ಬಿಬಿಎಂಪಿ, ಬಿಡಿಎ, ಬಿಎಂಆರ್‍ಸಿಎಲ್, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಎಂಆರ್‍ಡಿಎ ಯೋಜನೆಗಳನ್ನು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ಮಾಡಲು ಹಾಗೂ ನಿರ್ವಹಣೆ ಮಾಡುವ ಸಲುವಾಗಿ ಸಾಮಾಜಿಕ ಜಾಲತಾಣ ತಂಡವೊಂದನ್ನು ರಚಿಸಲು/ನೇಮಿಸಲು ಕೆಎಸ್‌ಎಂಸಿಎ ಸೇವೆ ಪಡೆಯಲಿದೆ. ಈ ಸೇವೆ ಪಡೆಯಲು ತಿಂಗಳಿಗೆ 60.00 ಲಕ್ಷ ರು.ಗಳಂತೆ ಒಂದು ವರ್ಷದ ಅವಧಿಗೆ ಪಡೆಯಲು ಕೆಟಿಪಿಪಿ ಕಾಯ್ದೆ 199ರ ಕಲಂ 4(ಜಿ) ಅಡಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಪಾರದರ್ಶಕ ಕಾಯ್ದೆಯಿಂದ ವಿನಾಯಿತಿ ನೀಡಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.
ಗ್ಯಾರಂಟಿ ಯೋಜನೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳನ್ನು ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಾರ ಮಾಡಲು ಪಾಲಿಸಿ ಫ್ರಂಟ್ ಹೆಸರಿನ ಕಂಪನಿಗೆ 7.20 ಕೋಟಿ ರು. ವೆಚ್ಚದ ಗುತ್ತಿಗೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ; ‘ದ ಪಾಲಿಸಿ ಫ್ರಂಟ್’ಗೆ 7.20 ಕೋಟಿ ಕೊಟ್ಟ ಸರ್ಕಾರ
ಅಲ್ಲದೇ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡುವ ಸಲುವಾಗಿಯೇ ಈಗಾಗಲೇ ರೈಟ್ ಪೀಪಲ್ ಹೆಸರಿನ ಸಂಸ್ಥೆ ಮೂಲಕ 9.25 ಕೋಟಿ ರು. ವೆಚ್ಚ ಮಾಡಿದೆ.
ಗ್ಯಾರಂಟಿ ಪ್ರಚಾರ; ಅನುದಾನ ಕೊರತೆಯಿದ್ದರೂ ರೈಟ್ ಪೀಪಲ್‌ನ 9.25 ಕೋಟಿ ವೆಚ್ಚದ ಪ್ರಸ್ತಾವಕ್ಕೆ ಒಪ್ಪಿಗೆ
ಇದರ ಮಧ್ಯೆಯೇ ಬಿಬಿಎಂಪಿ, ಬಿಡಿಎ, ಬಿಎಂಆರ್‍ಸಿಎಲ್, ಬಿಡಬ್ಲ್ಯೂಎಸ್‌ಎಸ್‌ಬಿ ಯೋಜನೆಗಳೊಂದಿಗೇ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವ ನಿಟ್ಟಿನಲ್ಲಿ ಪ್ರತ್ಯೇಕ ತಂಡವೊಂದನ್ನು ರಚಿಸಲು ಹೊರಟಿರುವುದು ಸಾರ್ವಜನಿಕರ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.
ವಿಶೇಷವೆಂದರೇ 9.25 ಕೋಟಿ ರುಗಳನ್ನು ಒದಗಿಸಲು ಸರ್ಕಾರದ ಬಳಿ ಅನುದಾನವೇ ಇರಲಿಲ್ಲ. ಅನುದಾನ ಕೊರತೆ ಇದ್ದರೂ ರೈಟ್ ಪೀಪಲ್ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರವು ಒಪ್ಪಿಕೊಂಡಿತ್ತು.
ಗ್ಯಾರಂಟಿ ಯೋಜನೆ ಕುರಿತಾಗಿ ಮೌಲ್ಯಮಾಪನ, ನಿರಂತರ ನಿಗಾವಣೆ ಸೇರಿದಂತೆ ಮತ್ತಿತರೆ ಸೇವೆಗಳನ್ನು ಪಡೆಯಲು ಸ್ಪರ್ಧಾತ್ಮಕ ಟೆಂಡರ್ ಆಹ್ವಾನಿಸಲು ಸಾಕಷ್ಟು ಅವಕಾಶಗಳಿದ್ದವು. ಅಲ್ಲದೇ ಈ ಕುರಿತು ನುರಿತ ಮತ್ತು ಅನುಭವವುಳ್ಳ ಕಂಪನಿ, ಸಂಸ್ಥೆಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆಯ (ಇಒಐ) ಅರ್ಜಿ ಆಹ್ವಾನಿಸಬಹುದಿತ್ತು. ಅಂದಾಜು ವೆಚ್ಚವನ್ನು ದರ ಸಂಧಾನದ ಮೂಲಕ ನಿಗದಿಪಡಿಸಬಹುದಿತ್ತು. ಆದರೆ ಸರ್ಕಾರವು ಈ ಯಾವ ಪ್ರಕ್ರಿಯೆಗಳನ್ನೂ ನಡೆಸಿಲ್ಲ. ಬದಲಿಗೆ ರೈಟ್ ಪೀಪಲ್‌ಗೆ ನೇರವಾಗಿ 4(ಜಿ) ವಿನಾಯಿತಿ ನೀಡಿತ್ತು.
ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ 12 ಕೋಟಿ; ದುಂದುವೆಚ್ಚಕ್ಕೆ ದಾರಿ
ಎಂ2ಎಂ ಮಾಧ್ಯಮ ಸಂಸ್ಥೆಗೆ ಸಮೀಕ್ಷೆ ನಡೆಸಲು 1 ಕೋಟಿ ರು, ಮುಂಬೈ ಮೂಲದ ಎಕ್ಸ್ ಕೆಡಿಆರ್ ಸಂಸ್ಥೆಗೆ ಅಧ್ಯಯನದ ಹೆಸರಿನಲ್ಲಿ 1.03 ಕೋಟಿ ರು.ಗಳನ್ನು ನೀಡಿದೆ. ಈ ಎರಡೂ ಸಂಸ್ಥೆಗಳು ಈಗಾಗಲೇ ಮುಂಗಡ ಹಣ ಪಡೆದು ಸಮೀಕ್ಷೆ ಕಾರ್ಯವನ್ನೂ ಕೈಗೆತ್ತಿಕೊಂಡಿದೆ.
ಈ ಎರಡೂ ಖಾಸಗಿ ಸಂಸ್ಥೆಗಳು ಈಗಾಗಲೇ ಸಮೀಕ್ಷೆ ಮತ್ತು ಅಧ್ಯಯನ ನಡೆಸುತ್ತಿರುವಾಗಲೇ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ನಡೆಸಲಿರುವ ಸಮೀಕ್ಷೆಗೆ 12 ಕೋಟಿ ರು ವೆಚ್ಚ ಮಾಡುತ್ತಿರುವುದು ದುಂದುವೆಚ್ಚಕ್ಕೆ ದಾರಿಮಾಡಿಕೊಟ್ಟಂತಾಗಿತ್ತು.
ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್ ವರ್ಕ್ ಕಂಪನಿಗೆ 4(ಜಿ) ವಿನಾಯಿತಿ ನೀಡುವ ಮುನ್ನ ಆರ್ಥಿಕ ಇಲಾಖೆಯ ಅಧಿಕಾರಿಗಳು ಆಡಳಿತಾತ್ಮಕ ಪ್ರಕ್ರಿಯೆಗಳನ್ನೇ ನಡೆಸಿರಲಿಲ್ಲ.
ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬರಲಿದೆ ಎಂದು ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿಯ ಈದಿನ.ಕಾಮ್ ವೆಬ್‌ಸೈಟ್ ಚುನಾವಣೆ ಪೂರ್ವ ಸಮೀಕ್ಷೆ ಹೇಳಿತ್ತು. ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದ ಎರಡೇ ಎರಡು ತಿಂಗಳಲ್ಲಿ ಇದೇ ಕಂಪನಿಗೇ 58 ಸಾವಿರ ಕೋಟಿ ರು. ವೆಚ್ಚದ ಗ್ಯಾರಂಟಿಗಳ ಸಮೀಕ್ಷೆ ನಡೆಸಲು 1 ಕೋಟಿ ರು. ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು.
ಗ್ಯಾರಂಟಿಗಳ ಕುರಿತಾಗಿ ಐಸೆಕ್, ಮೌಲ್ಯಮಾಪನ ಪ್ರಾಧಿಕಾರಗಳಿಂದ ಸಮೀಕ್ಷೆ ನಡೆಸಬೇಕಿತ್ತು ಎಂದು ಪ್ರತಿಪಾದಿಸಿರುವ ಹಲವು ಅಧಿಕಾರಿಗಳು, ಕೇವಲ ಪ್ರಕಾಶನ, ಮುದ್ರಣದಂತಹ ಸೇವೆಗಳನ್ನು ಒದಗಿಸುತ್ತಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿಗೆ ವಹಿಸಿರುವುದಕ್ಕೆ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರು.
ಸರ್ವೆ ಕಾರ್ಯಕ್ಕೆ ಸರ್ಕಾರದ ಬೆನ್ನು ಬಿದ್ದಿದ್ದ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿ; ದಾಖಲೆ ಬಹಿರಂಗ
ಗ್ಯಾರಂಟಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಗಳು ಜೂನ್, ಜುಲೈವರೆಗೂ ಚಾಲ್ತಿಯಲ್ಲಿದ್ದವು. ಇದಾದ ನಂತರವೂ ಯೋಜನೆ ಅನುಷ್ಠಾನದಲ್ಲಿ ಗೊಂದಲ ಮುಂದುವರೆದಿತ್ತು. ಬಹುತೇಕ ಫಲಾನುಭವಿಗಳಿಗೆ ಹಣವೂ ಇದುದವರೆಗೂ ಪಾವತಿಯಾಗಿಲ್ಲ. ಮಾರ್ಗಸೂಚಿಗಳ ಸಂಬಂಧ ಆಗಸ್ಟ್‌ವರೆಗೂ ತಿದ್ದುಪಡಿಗಳು ಮುಂದುವರೆದಿದ್ದವು. ಕೆಎಸ್‌ಆರ್‍ಟಿಸಿಯು 20 ಲಕ್ಷ ರು.ಗಳನ್ನು ನೀಡಿದ್ದರೂ ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನೇ ಒದಗಿಸಿರಲಿಲ್ಲ.
ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍ಟಿಸಿ
ಅಲ್ಲದೇ ಬೆಸ್ಕಾಂ ಕೂಡ ಸಮಗ್ರ ಕಡತವನ್ನೇ ಮುಚ್ಚಿಟ್ಟಿತ್ತು.
ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ
ಅದೇ ರೀತಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಹ ಎಂ2ಎಂ ಕಂಪನಿಯೊಂದಿಗೆ ಎಂಒಯು ಸೇರಿ ಹಲವು ದಾಖಲೆಗಳೇ ಲಭ್ಯವಿಲ್ಲ ಎಂದು ಆರ್‍ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿತ್ತು.
ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ
ಇದರ ನಡುವೆಯೇ ಸರ್ಕಾರವು ಗ್ಯಾರಂಟಿಗಳನ್ನು ಅಧ್ಯಯನ ನಡೆಸಲು ಮುಂಬೈ ಮೂಲದ ಸಂಸ್ಥೆಗೆ 1.03 ಕೋಟಿ ರು. ವೆಚ್ಚ ಮಾಡಲು 4(ಜಿ) ವಿನಾಯಿತಿ ನೀಡಿತ್ತು.
ಗ್ಯಾರಂಟಿ ಸಮೀಕ್ಷೆ, ಅನುಷ್ಠಾನ ಸಮಿತಿ ರಚನೆ ಬೆನ್ನಲ್ಲೇ ಈಗ ಅಧ್ಯಯನ; ಮುಂಬೈ ಸಂಸ್ಥೆಗೆ 1.03 ಕೋಟಿ ರು ನೀಡಿಕೆ
ಗ್ಯಾರಂಟಿ ಯೋಜನೆಗಳನ್ನು ಏಕಕಾಲಕ್ಕೆ ಐದಾರು ಸಮಿತಿಗಳು ಸಮೀಕ್ಷೆ ನಡೆಸುತ್ತಿರುವುದು ಮತ್ತು ಇದಕ್ಕಾಗಿ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ.