Friday | April 10, 2026 |

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೊಪ್ಪಳದಲ್ಲೂ ನಿವೇಶನ; 1.18 ಕೋಟಿ ನಷ್ಟ, ನಿಯಮ ಉಲ್ಲಂಘಿಸಿದ ಸರ್ಕಾರ

ಬೆಂಗಳೂರು; ಕೊಪ್ಪಳ  ನಗರದಲ್ಲಿ ಸರ್ಕಾರಿ ಮಾರ್ಗಸೂಚಿ ದರದ ಪ್ರಕಾರ 1.31 ಕೋಟಿ ರು ಬೆಲೆಬಾಳುವ ಸಿ ಎ ನಿವೇಶನವನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೇವಲ 13.19 ಲಕ್ಷ ರುಪಾಯಿಗೆ ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ನಗರಾಭಿವೃದ್ಧಿ ಇಲಾಖೆಯು  ಸಚಿವ ಸಂಪುಟಕ್ಕೆ ಕಡತ ಮಂಡಿಸಿರುವುದು ಇದೀಗ ಬಹಿರಂಗವಾಗಿದೆ.

 

ನಾಳೆ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ಈ ಪ್ರಸ್ತಾವವನ್ನು ಮಂಡಿಸಿದೆ. ಸಚಿವ ಸಂಪುಟಕ್ಕೆ ಮಂಡಿಸಿರುವ ಕಡತವು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳು) ನಿಯಮಗಳಲ್ಲಿ ರಿಯಾಯಿತಿ ದರ ಅಥವಾ ಉಚಿತವಾಗಿ ಮಂಜೂರು ಮಾಡುವುದು ಮತ್ತು ರಾಜಕೀಯ ಪಕ್ಷಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ನಿಯಮಗಳಲ್ಲಿ ಅವಕಾಶವೇ ಇಲ್ಲ.

 

ಆದರೂ ಸಹ ಸಚಿವ ಬೈರತಿ ಸುರೇಶ್‌ ಅವರ ಸೂಚನೆ ಮೇರೆಗೆ ನಗರಾಭಿವೃದ್ಧಿ ಇಲಾಖೆಯು ಈ ಪ್ರಸ್ತಾವವಕ್ಕೆ ಅನುಮೋದನೆ ಪಡೆಯಲು ಸಚಿವ ಸಂಪುಟಕ್ಕೆ ಕಡತ ಮಂಡಿಸಿರುವುದು ಗೊತ್ತಾಗಿದೆ.

 

ಅದಷ್ಟೇ ಅಲ್ಲ, ರಿಯಾಯಿತಿ ದರದಲ್ಲಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಾಗರಿಕ ಸೌಲಭ್ಯ ನಿವೇಶನವನ್ನು  ಮಂಜೂರು ಮಾಡಿದಲ್ಲಿ ಪ್ರಾಧಿಕಾರಕ್ಕೆ 1.18 ಕೋಟಿಯಷ್ಟು ಆರ್ಥಿಕವಾಗಿ ನಷ್ಟವುಂಟಾಗಲಿದೆ ಎಂದು ಆರ್ಥಿಕ ಇಲಾಖೆಯು ಸ್ಪಷ್ಟವಾಗಿ ಅಭಿಪ್ರಾಯ ನೀಡಿತ್ತು. ಆದರೂ ನಗರಾಭಿವೃದ್ಧಿ ಇಲಾಖೆಯು ಆರ್ಥಿಕ ಇಲಾಖೆಯು ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಸಿ ಎ ನಿವೇಶನವನ್ನು ಮಂಜೂರು ಮಾಡಲು ಹೊರಟಿರುವುದು ತಿಳಿದು ಬಂದಿದೆ.

 

ಪ್ರಕರಣದ ವಿವರ

 

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಒಡೆತನದಲ್ಲಿರುವ ಕೊಪ್ಪಳ ಗ್ರಾಮದ ಸರ್ವೆ ನಂಬರ್‍‌ 150/1, 2,3,4,5,10,12,14ರಲ್ಲಿರುವ 12 ಎಕರೆ 28 ಗುಂಟೆ ವಿಸ್ತಿರ್ಣದಲ್ಲಿರುವ ಬಡಾವಣೆಯಲ್ಲಿರುವ 3,749.85 ಚ ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು  ಕಾಂಗ್ರೆಸ್‌ ಭವನ ಟ್ರಸ್ಟ್‌ ಗೆ ಕಚೇರಿ ಕಟ್ಟಡದ ನಿರ್ಮಾಣದ ಉದ್ದೇಶಕ್ಕಾಗಿ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡುವ ಬಗ್ಗೆ ನಗರಾಭಿವೃದ್ಧಿ ಇಲಾಖೆಯು ಸಚಿವ ಸಂಪುಟಕ್ಕೆ ಕಡತವನ್ನು (ಸಂಖ್ಯೆ 686/2025) ಮಂಡಿಸಿದೆ.

 

 

ಈ ನಾಗರಿಕ ಸೌಲಭ್ಯ ನಿವೇಶನದ ಮೊತ್ತ 1.31 ಕೋಟಿ ರು ಇದೆ. ಈ ಸಂಬಂಧ 13.19 ಲಕ್ಷ ರು ಸಂದಾಯ ಮಾಡಿದೆ. ಇದೇ ಮೊತ್ತಕ್ಕೆ ಹಂಚಿಕೆ ಮಾಡಲು ಕೋರಿರುತ್ತಾರೆ. ಆದ್ದರಿಂದ ಕಾಂಗ್ರೆಸ್‌ ಭವನ ಟ್ರಸ್ಟ್‌ ಇವರು 13.19 ಲಕ್ಷ ರು ಪಾವತಿಸಿದ್ದು ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದ ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮ 1991ರ ಪ್ರಕಾರ ಪೂರ್ಣ ಮೊತ್ತ ಪಾವತಿಸಿದ ನಂತರ ಹಂಚಿಕೆ ಮಾಡಲಾಗುವುದು. ಸದರಿ ಮೊತ್ತಕ್ಕೆ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಲು ಮಾರ್ಗದರ್ಶನ ಮಾಡಲು ಆಯುಕ್ತರು ಸರ್ಕಾರವನ್ನು ಕೋರಿರುವುದು ಗೊತ್ತಾಗಿದೆ.

 

ನಿಯಮದಲ್ಲಿ ಅವಕಾಶವೇ ಇಲ್ಲ

 

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 2 ಮತ್ತು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳು (ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮ 1991ರಂತೆ ರಾಜಕೀಯ ಪಕ್ಷಗಳ ಭವನಗಳಿಗೆ ನಾಗರಿಕ ಸೌಲಭ್ಯ ನಿವೇಶನವನ್ನು ಹಂಚಿಕೆ ಮಾಡಲು ನಿಯಮಗಳಲ್ಲಿ ಅವಕಾಶಗಳಿಲ್ಲ. ‘ಆದ್ದರಿಂದ ಕಾಂಗ್ರೆಸ್‌ ಭವನ ಟ್ರಸ್ಟ್‌ ಗೆ  ಕಟ್ಟಡ ನಿರ್ಮಿಸುವ ಉದ್ದೇಶಕ್ಕೆ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯವು ತಿಳಿಸಿದೆ,’  ಎಂದು ಸಚಿವ ಸಂಪುಟದ ಟಿಪ್ಪಣಿ ಹಾಳೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಆದರೂ ನಗರಾಭಿವೃದ್ಧಿ ಸಚಿವರ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಆದೇಶಿಸಿದ್ದರು. ಹೀಗಾಗಿ ಇಲಾಖೆಯು ಪ್ರಸ್ತಾವ ಮಂಡಿಸಿದೆ.

 

1.18 ಕೋಟಿ ನಷ್ಟ

 

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸರ್ಕಾರದ ವತಿಯಿಂದ ಯಾವುದೇ ಅನುದಾನವನ್ನು ನೀಡುವುದಿಲ್ಲ. ಪ್ರಾಧಿಕಾರಳು ಸ್ವ-ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಕಾರ್ಯನಿರ್ವಹಿಸುತ್ತವೆ. ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಒಡೆತನದಲ್ಲಿರುವ ಕೊಪ್ಪಳದ ಗ್ರಾಮದ ಸರ್ವೇ ನಂಬರ್ 150/1 ಮತ್ತು ಇತರೆ ನಂಬರ್‍‌ಗಳಲ್ಲಿರುವ ಒಟ್ಟು 12 ಎಕರೆ 28 ಗುಂಟೆ ವಿಸ್ತೀರ್ಣದ ಬಡಾವಣೆಯಲ್ಲಿರುವ ನಾಗರಿಕ ಸೌಲಭ್ಯ ನಿವೇಶನದ ಪೈಕಿ 3,749.85 ಚ ಮೀಟ್ ವಿಸ್ತೀರ್ಣದ ಮೊತ್ತವೇ 1,31,31,975 ರು ಗಳಾಗುತ್ತದೆ.  ಈ ಮೊತ್ತದ ಪೈಕಿ ಕಾಂಗ್ರೆಸ್‌ ಭವನ ಟ್ರಸ್ಟ್‌ ಇವರು 13.19 ಲಕ್ಷ ರು ಪಾವತಿಸಿದೆ.

 

 

ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ಉಚಿತವಾಗಿ, ರಿಯಾಯಿತಿ ದರದಲ್ಲಿ ಮಂಜೂರು ಮಾಡಿಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಆರ್ಥಿಕವಾಗಿ 1.18 ಕೋಟಿಯಷ್ಟು ನಷ್ಟವಾಗಲಿದೆ ಎಂದು ಆರ್ಥಿಕ ಇಲಾಖೆಯು ಸ್ಪಷ್ಟವಾಗಿ ಹೇಳಿತ್ತು. ಆದರೂ ಸಚಿವರ ಆದೇಶದ ಮೇರೆಗೆ ಈ ಪ್ರಸ್ತಾವವನ್ನು ಸಚಿವ ಸಂಪುಟಕ್ಕೆ ಮಂಡಿಸಲಾಗಿದೆ.

 

 

ರಾಜ್ಯ ಕಾಂಗ್ರೆಸ್‌ ಸರ್ಕಾರವು ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ವಶ ಅಥವಾ ಸ್ವಾಧೀನದಲ್ಲಿರುವ ಸರ್ಕಾರಿ ಜಾಗಗಳನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡುತ್ತಿರುವ ಪ್ರಕರಣದಲ್ಲಿ  ಹಿತಾಸಕ್ತಿ ಸಂಘರ್ಷ ಎದುರಾಗಿತ್ತು.

 

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

 

 

 

 

 

ತುಮಕೂರು ಮಹಾನಗರ ಪಾಲಿಕೆಯ ಸುಪರ್ದಿಯಲ್ಲಿರುವ ಬಹು ಕೋಟಿ ಬೆಲೆಬಾಳುವ ಒಟ್ಟು ಜಮೀನಿನ ಪೈಕಿ 2 ಎಕರೆ ಜಾಗವನ್ನು ಸಾರ್ವಜನಿಕ ಹರಾಜು ನಡೆಸದೇ ನೇರವಾಗಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಈ ಜಾಗವು ವ್ಯಾಜ್ಯದಿಂದ ಕೂಡಿದೆಯಲ್ಲದೇ  ನ್ಯಾಯಾಲಯದಲ್ಲಿ ಅಸಲು ದಾವೆ ಅರ್ಜಿಯ ವಿಚಾರಣೆಯು ಇನ್ನೂ ಇತ್ಯರ್ಥಗೊಂಡಿಲ್ಲ. ಆದರೂ ಸಹ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 2 ಎಕರೆ ಜಮೀನು ಮಂಜೂರು ಮಾಡಲು  ಸಚಿವ ಸಂಪುಟವು  ತೀರ್ಮಾನ ತೆಗೆದುಕೊಂಡಿದೆ.

 

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ

 

ಹೀಗೆ ಬಹುಕೋಟಿಯಷ್ಟು ಬೆಲೆ ಬಾಳುವ ಈ ಜಮೀನನ್ನು ಮಾರ್ಗಸೂಚಿ ಮೌಲ್ಯದ ಕೇವಲ ಶೇ.5ರಷ್ಟು ಅಂದರೇ 90 ಲಕ್ಷ ರು ದರ ವಿಧಿಸಿ ಈಗ ಕಾಂಗ್ರೆಸ್‌ ಪಕ್ಷಕ್ಕೆ ಮಂಜೂರು ಮಾಡಲಾಗಿದೆ. ಸಚಿವ ಸಂಪುಟವು ಕೈಗೊಂಡಿರುವ  ತೀರ್ಮಾನವು  (ಸಂಖ್ಯೆ ಸಿ; 396/2025) ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟಕ್ಕೆ ಕಾರಣವಾಗಿದೆ.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

ಬೆಳಗಾವಿಯಲ್ಲಿನ  ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷಗಳಾದ ಹಿನ್ನೆಲೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷವು (ಕೆಪಿಸಿಸಿ) ರಾಜ್ಯಾದ್ಯಂತ 100 ಕಾಂಗ್ರೆಸ್‌ ಭವನಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಸಂಬಂಧ ಪಕ್ಷಕ್ಕೆ ಗುರಿ ನೀಡಿದ್ದರು.  ಹೀಗಾಗಿ ಎಲ್ಲಾ ಸಚಿವರೂ   ನಗರ ಮತ್ತು ಗ್ರಾಮೀಣ ಸ್ಥಳೀಯ ಸರ್ಕಾರಗಳ ಅಧೀನದಲ್ಲಿರುವ ಮತ್ತು ಅವುಗಳ ಹೆಸರಿನಲ್ಲಿರುವ ಜಮೀನು, ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು.

 

ಕಾಂಗ್ರೆಸ್‌ ಕಚೇರಿ ಕಟ್ಟಡ ನಿರ್ಮಾಣ; ಪಂಚಾಯ್ತಿಗಳ ಜಾಗದ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌

 

ಕಾಂಗ್ರೆಸ್‌ ಭವನ ಟ್ರಸ್ಟ್‌ ಯಾವ ಕಾಯ್ದೆ ಅಡಿ ನೋಂದಣಿಯಾಗಿದೆ ಎಂಬುದರ ಕುರಿತು ಇಲಾಖೆಯು ಪ್ರಶ್ನಿಸಿತ್ತು.

 

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

 

 

 

ಹಿಂದುಳಿದ ಮತ್ತು ನಾಯಕ  ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು  ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್‌ ನಂತರದ  ವಿದ್ಯಾರ್ಥಿ ನಿಲಯ ಸ್ಥಾಪನೆ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗಾಗಿ ಕಾಯ್ದಿರಿಸಿದ್ದ ಸರ್ಕಾರಿ ಜಮೀನನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಸಚಿವ ಸಂಪುಟವು ಈಚೆಗಷ್ಟೇ ಅನುಮೋದನೆ ನೀಡಿತ್ತು.

 

ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು

 

ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಅಗಲಕುರ್ಕಿ ಗ್ರಾಮದಲ್ಲಿ ಅನುಮೋದಿತ ಬಡಾವಣೆಯಲ್ಲಿ ನಿವೇಶನ ಕೋರಿದ್ದರು. ಆದರೀಗ ನಗರಾಭಿವೃದ್ದಿ ಇಲಾಖೆಯು  ಸ್ಥಳವನ್ನು ಬದಲಾಯಿಸಿತ್ತು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ

 

ಚಿಕ್ಕಬಳ್ಳಾಪುರ ಜಿಲ್ಲೆಗೆ  ಉಸ್ತುವಾರಿ ಸಚಿವ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್‍‌ ಅವರ ಸೂಚನೆಯಂತೆ ನಗರಾಭಿವೃದ್ದಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣಕ್ಕೆ ನಿವೇಶನವನ್ನು ಮಂಜೂರು ಮಾಡಲು ತಯಾರಿ ನಡೆಸಿತ್ತು. ಈ ಕುರಿತು ‘ದಿ ಫೈಲ್‌’, ಮೇ 5ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಕಾಂಗ್ರೆಸ್‌ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ

 

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ವಶದಲ್ಲಿರುವ ನಿವೇಶನವನ್ನು ಜಿಲ್ಲಾ ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿತ್ತು.

 

ಕಾಂಗ್ರೆಸ್‌ ಪಕ್ಷಕ್ಕೆ ನಗರ ಪಾಲಿಕೆ ಆಸ್ತಿ ಮಂಜೂರು; ಬಿಜೆಪಿ ಹಾದಿ ತುಳಿದ ಕಾಂಗ್ರೆಸ್‌, ಕಡಿಮೆ ಬೆಲೆ ನಿಗದಿಯೇಕೆ?

 

ಆದರೀಗ ಆರ್ಥಿಕ ಇಲಾಖೆಯು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಸ್ತಿಯನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಒಪ್ಪಿಗೆ ಸೂಚಿಸಿತ್ತು. ಇದರ ಅಭಿಪ್ರಾಯದ ಮೇರೆಗೆ ಸಚಿವ ಸಂಪುಟವೂ 2025ರ ಫೆ.20ರಂದು ನಡೆದ ಸಭೆಯಲ್ಲಿ ಮಂಜೂರು ಮಾಡಿತ್ತು.

 

ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ

 

ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿತ್ತು.

 

ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?

 

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಸಂಘ ಪರಿವಾರದ ಇನ್ನಿತರೆ ಸಂಘ ಸಂಸ್ಥೆಗಳಿಗೂ ಗೋಮಾಳ, ಸರ್ಕಾರಿ ಜಮೀನು, ಬಿ ಖರಾಬು ಜಮೀನುಗಳನ್ನು ಚಿಲ್ಲರೆ ದರದಲ್ಲಿ ಮಂಜೂರು ಮಾಡಿತ್ತು.

 

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

 

ಇದೀಗ ಕಾಂಗ್ರೆಸ್‌ ಸರ್ಕಾರವು ಸಹ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ ಭವನಗಳಿಗೆ ಕಟ್ಟಡ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧೀನದಲ್ಲಿ ಮತ್ತು ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿರುವ ನಿವೇಶನಗಳ ಮೇಲೆ ಕಣ್ಣು ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

Hot this week

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!

ಬೆಂಗಳೂರು; ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ನೀಡಿದ್ದ ಅನುದಾನ ಮತ್ತು...

Related Articles

Popular Categories

error: Content is protected !!