ಬೆಂಗಳೂರು; ‘ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಮತ್ತು ಹೋರಾಟಗಾರರ ಮಹತ್ವದ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿ ಸುಮಾರು ಒಂದುವರೆ ತಿಂಗಳು ಕಳೆದಿದ್ದರೂ ಸಹ ಇದುವರೆಗೂ ಪರಿಷ್ಕೃತ ಅಧಿಸೂಚನೆ ಹೊರಬಿದ್ದಿಲ್ಲ.
ʻವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿದ್ದ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆʼ, ʻಭೂಸ್ವಾಧೀನ ಕೈಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಐತಿಹಾಸಿಕ ನಿರ್ಧಾರʼ ಎಂದೆಲ್ಲಾ ಭರ್ಜರಿ ಪ್ರಚಾರ ಪಡೆದುಕೊಂಡಿದ್ದ ಸರ್ಕಾರವು ಇದುವರೆಗೂ ಅಧಿಸೂಚನೆ ಹೊರಡಿಸದೇ ಕಾಲಹರಣ ಮಾಡುತ್ತಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಹರಳೂರು ಸೇರಿದಂತೆ ಹಾಗೂ ಇತರೆ ಗ್ರಾಮಗಳಲ್ಲಿನ 1,774 ಎಕರೆ ವಿಸ್ತೀರ್ಣದ ಜಮೀನನ್ನು ಅಂತಿಮ ಅಧಿಸೂಚನೆಯಿಂದ ಕೈಬಿಟ್ಟಿದೆಯೇ, ಈ ಸಂಬಂಧ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆಯೇ ಇಲ್ಲವೇ ಎಂಬ ಕುರಿತು ‘ದಿ ಫೈಲ್’ ಆರ್‍ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಗೆ ಉತ್ತರಿಸಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ‘ಅಂತಿಮ ಅಧಿಸೂಚನೆಯಿಂದ ಕೈಬಿಡುವ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿರುವುದಿಲ್ಲ,’ ಎಂದು ಉತ್ತರಿಸಿದೆ.
ಈ ಮಧ್ಯೆ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಅಧಿಕಾರಿಗಳು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹ್ಯಾಡಾಳ, ಗೋಕರೆಬಚ್ಚೆನಹಳ್ಳಿ ಗ್ರಾಮಗಳ 439 ಎಕರೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಇದೇ ಸೆಪ್ಟಂಬರ್ 6ರಂದು ದರ ನಿಗದಿ ಸಭೆ ಆಯೋಜಿಸಿದ್ದಾರೆ. ಈ ಕುರಿತು ಅಧಿಕಾರಿಗಳು ರೈತರಿಗೆ ನೋಟೀಸ್ ಕೂಡ ನೀಡಿದ್ದಾರೆ. ಇದನ್ನು ಪ್ರತಿರೋಧಿಸಿರುವ ರೈತರು, ಕೆಐಎಡಿಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.
ಸಿದ್ದರಾಮಯ್ಯ ಅಂದು ಹೇಳಿದ್ದೇನು?
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ಹೇಳಿಕೆ ನೀಡಿದ್ದರು.
ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ. ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ ಎಂದು ಹೇಳಿದ್ದರು.
1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದರು.
ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಒತ್ತಿ ಹೇಳಿದ್ದರು.
ಕೈಬಿಡಲು ಒತ್ತಡವಿದೆಯೇ?
ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಪ್ರಕಾರ ಮುಖ್ಯಮಂತ್ರಿ ನೀಡಿರುವ ಭರವಸೆಯನ್ನು ಅನುಷ್ಠಾನಗೊಳಿಸಲು ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು ಮುಂದಾಗಿಲ್ಲ. ಪರಿಷ್ಕೃತ ಅಧಿಸೂಚನೆ ಹೊರಡಿಸುವ ಸಂಬಂಧ ಅಧಿಕಾರಿಗಳ ಮಟ್ಟದಲ್ಲಿ ತಿಂಗಳಾದರೂ ಒಂದೇ ಒಂದು ಸಭೆಯನ್ನೂ ನಡೆಸಿಲ್ಲ. ಹೀಗಾಗಿ ಸಚಿವ ಸಂಪುಟಕ್ಕೆ ಮಂಡಿಸಲು ಕಡತವೂ ಸಿದ್ಧಗೊಂಡಿಲ್ಲ. ಇದಕ್ಕೆ ಸಂಬಂಧಿಸಿದ ಕಡತವೂ ಸಚಿವರ ಕಚೇರಿಯಲ್ಲಿಯೇ ಇದೆ ಎಂದು ‘ದಿ ಫೈಲ್’ ಪ್ರತಿನಿಧಿಗೆ ಅಧಿಕಾರಿಗಳು ಮಾಹಿತಿ ಒದಗಿಸಿದ್ದಾರೆ.
ಅತ್ಯಾಧುನಿಕ ರಕ್ಷಣಾ ಮತ್ತು ವೈಮಾಂತರಿಕ ಪಾರ್ಕ್ ನಿರ್ಮಾಣಕ್ಕಾಗಿ ದೇವನಹಳ್ಳಿಯಲ್ಲಿ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ರೈತರ ಜಮೀನನ್ನು ಭೂಸ್ವಾಧೀನ ಮಾಡುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿತ್ತು. ಇದರಿಂದಾಗಿ 1197 ದಿನಗಳಿಂದ ನಡೆಯುತ್ತಿದ್ದ ರೈತ ಹೋರಾಟಕ್ಕೆ ಮಹತ್ವದ ಜಯ ಸಿಕ್ಕಿದಂತಾಗಿತ್ತು.
ಏರ್ ಪೋರ್ಟ್ ಗೆ ಸಮೀಪ ಇರುವುದರಿಂದ ಹಾಗೂ ಗ್ರೀನ ಬೆಲ್ಟ್ ನಲ್ಲಿ ಇರುವುದರಿಂದ ಸ್ವಾಧೀನ ಪಡಿಸಿಕೊಳ್ಳುವುದು ಬೇಡ ಎಂಬುವುದು ರೈತರ ಬೇಡಿಕೆ ಆಗಿತ್ತು. ಸರ್ಕಾರ ಈಗಾಗಲೇ ರೈತರು ಮತ್ತು ಹೋರಾಟಗಾರರ ಜೊತೆ ಸಭೆ ನಡೆಸಿದೆ. ಅವರ ಆಹವಾಲುಗಳನ್ನು ಆಲಿಸಿದೆ. ಕೆ ಎಚ್ ಮುನಿಯಪ್ಪ ಅವರು ಕೂಡಾ ರೈತರ ಪರವಾಗಿ ವಾದಿಸಿದ್ದರು.
ರೈತರ ಹೋರಾಟದಲ್ಲಿ ಪ್ರಗತಿಪರ ಸಂಘಟನೆಗಳು ಭಾಗಿಯಾಗಿದ್ದವು. ಪ್ರಗತಿಪರ ಹಾಗೂ ಎಡ ಸಂಘಟನೆಗಳು, ದಲಿತ ಸಂಘಟನೆಗಳು ಭಾಗಿಯಾಗಿದ್ದವು. ಇದೊಂದು ವಿಶಿಷ್ಟವಾದ ಃಆಘೂ ಐತಿಹಾಸಿಕವಾದ ಹೋರಾಟವಾಗಿತ್ತು. ಸಾಧಕ ಬಾಧಕಗಳನ್ನು ಚರ್ಚೆ ಮಾಡಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದರು.
1777 ಎಕರೆ ಜಮೀನನ್ನು ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಮಾಡಲಾಗಿತ್ತು. ಆದರೆ ಈ ಜಮೀನನ್ನು ಸಂಪೂರ್ಣವಾಗಿ ಕೈಬಿಡಲು ತೀರ್ಮಾನ ಮಾಡಲಾಗಿದೆ. ಆದರೆ, ರೈತರು ಸ್ವಯಂಪ್ರೇರಿತವಾಗಿ ಕೊಡಲು ಮುಂದೆ ಬಂದರೆ ಅಂತಹ ಜಮೀನುಗಳನ್ನು ಒಪ್ಪಂದದ ಮೇಲೆ ಸ್ವಾಧೀನ ಮಾಡಿಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದರು.
ಅಲ್ಲದೆ, ರೈತರು ಸ್ವಯಂಪ್ರೇರಿತವಾಗಿ ಭೂಮಿ ಕೊಡಲು ಮುಂದಾದರೆ ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಕೈಗಾರಿಕೆ ಬೆಳೆಯುವುದು ಬಹುಮುಖ್ಯ. ಹಾಗಾಗಿ ಭೂಮಿ ಕೊಡುವ ರೈತರಿಗೆ ಸೂಕ್ತ ಪರಿಹಾರವನ್ನು ನೀಡುತ್ತೇವೆ ಎಂದು ತಿಳಿಸಿದ್ದರು.
ಭೂಸ್ವಾಧೀನ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರದ ನಡೆಯನ್ನು ನಟ ಪ್ರಕಾಶ್ ರಾಜ್ ಪ್ರಶಂಸಿದ್ದರು. ಇದೇ ವೇಳೆ ಮಾತನಾಡಿದ್ದ ಪ್ರಕಾಶ್ ರೈ ಅವರು “ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ” ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದನ್ನು ಸ್ಮರಿಸಬಹುದು.
ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಕೈಗಾರಿಕೆ ಪ್ರದೇಶಕ್ಕಾಗಿ ಒಟ್ಟಾರೆ 13,529 ಎಕರೆ 6 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡಿತ್ತು. 823 ಘಟಕಗಳಿಗೆ 2,755 ಎಕರೆ 17 ಗುಂಟೆ ಜಮೀನನ್ನು ಹಂಚಿಕೆ ಮಾಡಲಾಗಿತ್ತು.
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಗ್ರಾಮಗಳಲ್ಲಿ ವಶಪಡಿಸಿಕೊಂಡಿದ್ದ ಕೈಗಾರಿಕೆ ಪ್ರದೇಶಗಳಲ್ಲಿ ಬೆಂಗಳೂರ ಗ್ರಾಮಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ದ ಪಾಳ್ಯ ಗ್ರಾಮದಲ್ಲಿ 8 ಎಕರೆ 28 ಗುಂಟೆ,
ಹರಳೂರು ಗ್ರಾಮದ 13 ಎಕರೆ 32 ಗುಂಟೆ ಸ್ವಾಧೀನಪಡಿಸಿಕೊಂಡಿತ್ತು.
ಪೋಲನಹಳ್ಳಿಯಲ್ಲಿ 32 ಗುಂಟೆ, ಬೀರಸಂದ್ರ, ಬೈರದೇನಹಳ್ಳಿ ನಾಗದೇವನಹಳ್ಳಿಯಲ್ಲಿ 118 ಎಕರೆ 37 ಗುಂಟೆಯೂ ಸೇರಿತ್ತು ಎಂದು ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು 2024ರಲ್ಲೇ ಉತ್ತರ ನೀಡಿದ್ದರು.