ಬೆಂಗಳೂರು; ಹಿಂದುಳಿದ ಮತ್ತು ನಾಯಕ ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸ್ಥಾಪನೆ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗಾಗಿ ಕಾಯ್ದಿರಿಸಿದ್ದ ಸರ್ಕಾರಿ ಜಮೀನುಗಳ ಮೇಲೂ ಕಾಂಗ್ರೆಸ್ ಭವನ ಟ್ರಸ್ಟ್‌ನ ಕಣ್ಣು ಬಿದ್ದಿದೆ.
ರಾಜ್ಯದ ನಗರಾಭಿವೃದ್ದಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಬಡಾವಣೆಗಳಲ್ಲಿ ನಾಗರೀಕ ಸೌಲಭ್ಯಗಳ ಉದ್ದೇಶಗಳಿಗಾಗಿ ಮೀಸಲಿಟ್ಟ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್ ಭವನ ಟ್ರಸ್ಟ್, ಇದೀಗ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನುಗಳನ್ನೂ ಮಂಜೂರು ಮಾಡಿಸಿಕೊಳ್ಳಲು ಹೊರಟಿದೆ. ಅಲ್ಲದೇ ಸರ್ಕಾರಿ ಜಮೀನು ಮಂಜೂರು ಮಾಡಿಸಿಕೊಳ್ಳಲು ಭೂ ಮಂಜೂರಾತಿ ನಿಯಮಗಳನ್ನೂ ಸಡಿಲಿಸಲು ತೀರ್ಮಾನಿಸಿದೆ.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು 2 ವರ್ಷಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲೇ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಲ್ಯಾಂಡ್ ಬ್ಯಾಂಕ್ ಮಾಡಿಕೊಡಲು ರಾಜ್ಯ ಕಾಂಗ್ರೆಸ್ ಸರ್ಕಾರವು ಹೊರಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಕಾಂಗ್ರೆಸ್ ಭವನ ಟ್ರಸ್ಟ್ ಕೋರುತ್ತಿರುವ ಜಮೀನು, ನಿವೇಶನಗಳ ಮಂಜೂರು ಮಾಡಲು ಕಾನೂನು, ಕಂದಾಯ ಮತ್ತು ಆರ್ಥಿಕ ಇಲಾಖೆಯು ಯಾವುದೇ ತಕರಾರು ವ್ಯಕ್ತಪಡಿಸುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಭವನ ಟ್ರಸ್ಟ್ ಕೋರಿರುವ ಪ್ರಸ್ತಾವವಗಳಿಗೆ ಸಹಮತಿ ವ್ಯಕ್ತಪಡಿಸುತ್ತಿದೆ.
ಹುಬ್ಬಳ್ಳಿ ಧಾರವಾಡ ನಗರಪಾಲಿಕೆ ವ್ಯಾಪ್ತಿಯಲ್ಲಿನ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್ ಹೆಸರಿಗೆ ಮಂಜೂರು ಮಾಡಲು ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಈಚೆಗಷ್ಟೇ ನೋಟೀಸ್ ಕೂಡ ಜಾರಿಯಾಗಿತ್ತು. ಅರ್ಜಿ ವಿಚಾರಣೆಯು ಮುಂದುವರೆದಿದೆ.
ಇದರ ಮಧ್ಯೆ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭವನದ ಕಟ್ಟಡ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ನಾಗರೀಕ ಸೌಲಭ್ಯ ಉದ್ದೇಶಗಳಿಗಾಗಿ ಮೀಸಲಿರಿಸಿದ್ದ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ಹೊರಟಿರುವ ನಗರಾಭಿವೃದ್ಧಿ ಇಲಾಖೆಯು ಕಡತವನ್ನು ಸಚಿವ ಸಂಪುಟಕ್ಕೆ ಮಂಡಿಸಿತ್ತು. ನಂತರ ಸಚಿವ ಸಂಪುಟವು ಮಾರುಕಟ್ಟೆ ಮೌಲ್ಯದ ಶೇ. 5ರ ದರದಲ್ಲಿ ಮಂಜೂರು ಮಾಡಲು ತೀರ್ಮಾನಿಸಿತ್ತು.
ಈ ಬೆಳವಣಿಗೆ ನಡುವೆಯೇ ಗಡಿ ಭಾಗದ ಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ಸಾರ್ವಜನಿಕ ಮತ್ತು ವಿವಿಧ ಸಮುದಾಯಗಳಿಗೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನಲ್ಲೇ ಕಾಂಗ್ರೆಸ್ ಭವನ ಟ್ರಸ್ಟ್ ಗೆ 25 ಗುಂಟೆ ಜಮೀನನ್ನು ಮಂಜೂರು ಮಾಡಲು ಹೊರಟಿದೆ. ಈ ಸಂಬಂಧ ಸಚಿವ ಸಂಪುಟಕ್ಕೆ ಪ್ರಸ್ತಾವವನ್ನು ಮಂಡಿಸಿದೆ.
ಇಂದು ಬೆಳಗ್ಗೆ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆಖ ಅಂತಿಮ ತೀರ್ಮಾನ ಹೊರಬೀಳಲಿದೆ.
ಸರ್ಕಾರಿ ಜಮೀನಿನ ಮೇಲೆ ಕಣ್ಣು
ಗಡಿ ಭಾಗದ ಚಾಮರಾಜನಗರ ತಾಲೂಕಿನ ಕಸಬಾ ಹೋಬಳಿಯ ಚಾಮರಾಜನಗರ ಗ್ರಾಮದ ಸರ್ವೆ ನಂಬರ್ 475ರಲ್ಲಿ ಒಟ್ಟು 29 ಎಕರೆ 12 ಗುಂಟೆ ವಿಸ್ತೀರ್ಣದಲ್ಲಿ ಸರ್ಕಾರಿ ಜಮೀನಿದೆ.
ಈ ಜಮೀನಿನಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ವಸತಿ ಗೃಹ, ಪೊಲೀಸ್ ಭವನಕ್ಕೆಂದು 17 ಗುಂಟೆ ಕಾಯ್ದಿರಿಸಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ 1 ಎಕರೆಯನ್ನು ಮೀಸಲಿರಿಸಿದೆ.
ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗಾಗಿ ನಿವೇಶನ ರಚನೆ ಉದ್ದೇಶಕ್ಕಾಗಿ 0;20 ಗುಂಟೆಯನ್ನು ಚಾಮರಾಜನಗರ ನಗರಸಭೆ ಪೌರಾಯುಕ್ತರ ಹೆಸರಿನಲ್ಲಿ ಕಾಯ್ದಿರಿಸಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹೆಸರಿನಲ್ಲಿ 0-8 ಗುಂಟೆ ಜಾಗವನ್ನು ಮೀಸಲಿರಿಸಿದೆ. ಆದಾಯ ತೆರಿಗೆ ಇಲಾಖೆಯ ಕಚೇರಿ ಕಟ್ಟಡ, ಸಿಬ್ಬಂದಿ ವಸತಿ ಗೃಹಕ್ಕಾಗಿ 0-20 ಗುಂಟೆಯನ್ನು ಕಾಯ್ದಿರಿಸಿದೆ.
ಅದೇ ರೀತಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ 1 ಎಕರೆಯನ್ನು ಮೀಸಲಿಟ್ಟಿದೆ. ಒಕ್ಕಲಿಗರ ಸಮುದಾಯ ಭವನಕ್ಕೆ 0-20 ಗುಂಟೆ ಜಾಗವನ್ನು ಕಾಯ್ದಿರಿಸಿದೆ.
ಹಿಂದುಳಿದ ಜನಾಂಗದವರಿಗೆ ಸ್ಮಶಾನ ಉದ್ದೇಶಕ್ಕೆ 1;10 ಎಕರೆ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ 0;20 ಗುಂಟೆ ಜಾಗವನ್ನು ಮೀಸಲಿರಿಸಿದೆ.
ಹಾಗೆಯೇ ನಾಯಕ ಮತ್ತು ಉಪ್ಪಾರ ಜನಾಂಗದವರ ಸ್ಮಶಾನ ಉದ್ದೇಶಕ್ಕೆ 1-0-0 ಎಕರೆ, ಜಿಲ್ಲಾ ಕ್ರೀಡಾಂಗಣಕ್ಕೆ 25 ಗುಂಟೆ, ಪೊಲೀಸ್ ಇಲಾಖೆಗೆ 2 ಎಕರೆಯನ್ನು ಮೀಸಲಿರಿಸಿರುವುದು ಗೊತ್ತಾಗಿದೆ.
ಹೀಗೆ ಸರ್ಕಾರಿ ಜಮೀನಿನಲ್ಲಿ ಸಾರ್ವಜನಿಕ ಉದ್ದೇಶಗಳಿಗಾಗಿ ಮೀಸಲಿರಿಸಿದ್ದ ಜಾಗದಲ್ಲಿಯೇ 25 ಗುಂಟೆ ವಿಸ್ತೀರ್ಣದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಸಚಿವ ಸಂಪುಟಕ್ಕೆ ಪ್ರಸ್ತಾವ ಮಂಡಿಸಿದೆ.
ಸಹಮತಿಸಿದ ಆರ್ಥಿಕ ಇಲಾಖೆ
ಚಾಮರಾಜ ನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕಸಬಾ ಹೋಬಳಿಯ ಚಾಮರಾಜನಗರ ಗ್ರಾಮದ ಸರ್ವೆ ನಂಬರ್ 475ರಲ್ಲಿ 25 ಗುಂಟೆ ಜಮೀನನ್ನು ಪ್ರಚಲಿತ ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೇ.100ರಷ್ಟು ಮತ್ತು ಇನ್ನಿತರೆ ಶಾಸನಬದ್ಧ ಶುಲ್ಕಗಳನ್ನು ವಿಧಿಸಿ ಕಾಂಗ್ರೆಸ್ ಭವನ ಟ್ರಸ್ಟ್ ಹೆಸರಿಗೆ ಜಮೀನು ಮಂಜೂರು ಮಾಡಲು ಆರ್ಥಿಕ ಇಲಾಖೆಯು ಸಹಮತಿ ವ್ಯಕ್ತಪಡಿಸಿರುವುದು ತಿಳಿದು ಬಂದಿದೆ.
ನಿಯಮ ಸಡಿಲಿಸಲು ‘ಕೈ’ ಹಿಡಿದ ಕಾನೂನು ಇಲಾಖೆ
ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು ಮಂಜೂರು ಮಾಡುವ ಸಂಬಂಧ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ನು ಸಡಿಲಿಸಲು ಕಾನೂನು ಇಲಾಖೆಯೂ ಸಹ ಸಹಮತಿ ವ್ಯಕ್ತಪಡಿಸಿರುವುದು ಗೊತ್ತಾಗಿದೆ.
ಕರ್ನಾಟಕ ಭೂ ಮಂಜೂರಾತಿಯ ನಿಯಮ 1969ರ 22 ಎ (2)ಯನ್ನು ಸಡಿಲಿಸಲು ಕಾನೂನು ಇಲಾಖೆಯು ಸಮ್ಮತಿಸಿದೆ. ಇದಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರೂ ಸಹ ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಅಗಲಕುರ್ಕಿ ಗ್ರಾಮದಲ್ಲಿ ಅನುಮೋದಿತ ಬಡಾವಣೆಯಲ್ಲಿ ನಿವೇಶನ ಕೋರಿದ್ದರು. ಆದರೀಗ ನಗರಾಭಿವೃದ್ದಿ ಇಲಾಖೆಯು ಸ್ಥಳವನ್ನು ಬದಲಾಯಿಸಿತ್ತು.
ಕಾಂಗ್ರೆಸ್ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ
ಚಿಕ್ಕಬಳ್ಳಾಪುರ ಜಿಲ್ಲೆಗೆ ಉಸ್ತುವಾರಿ ಸಚಿವ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರ ಸೂಚನೆಯಂತೆ ನಗರಾಭಿವೃದ್ದಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಭವನದ ಕಟ್ಟಡ ನಿರ್ಮಾಣಕ್ಕೆ ನಿವೇಶನವನ್ನು ಮಂಜೂರು ಮಾಡಲು ತಯಾರಿ ನಡೆಸಿತ್ತು. ಈ ಕುರಿತು ‘ದಿ ಫೈಲ್’, ಮೇ 5ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.
ಕಾಂಗ್ರೆಸ್ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ವಶದಲ್ಲಿರುವ ನಿವೇಶನವನ್ನು ಜಿಲ್ಲಾ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿತ್ತು.
ಕಾಂಗ್ರೆಸ್ ಪಕ್ಷಕ್ಕೆ ನಗರ ಪಾಲಿಕೆ ಆಸ್ತಿ ಮಂಜೂರು; ಬಿಜೆಪಿ ಹಾದಿ ತುಳಿದ ಕಾಂಗ್ರೆಸ್, ಕಡಿಮೆ ಬೆಲೆ ನಿಗದಿಯೇಕೆ?
ಆದರೀಗ ಆರ್ಥಿಕ ಇಲಾಖೆಯು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಸ್ತಿಯನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಒಪ್ಪಿಗೆ ಸೂಚಿಸಿತ್ತು. ಇದರ ಅಭಿಪ್ರಾಯದ ಮೇರೆಗೆ ಸಚಿವ ಸಂಪುಟವೂ 2025ರ ಫೆ.20ರಂದು ನಡೆದ ಸಭೆಯಲ್ಲಿ ಮಂಜೂರು ಮಾಡಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಶಾಸಕ ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ ಮತ್ತಿತರರು ಈ ಪ್ರಸ್ತಾವನೆಗೆ ಶಿಫಾರಸ್ಸು ಮಾಡಿದ್ದರು. ಇದನ್ನಾಧರಿಸಿ ಆರ್ಥಿಕ ಇಲಾಖೆಯ ಅಭಿಪ್ರಾಯ ಪಡೆಯಲು ಕಡತವನ್ನು ಪೌರಾಡಳಿತ ಇಲಾಖೆಯು ಕಡತವನ್ನು (DMA/DEV/OTH/285/2024) ಮಂಡಿಸಿದ್ದರು.
ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ
ಕೆಪಿಸಿಸಿಗೆ ಕಾರ್ಯಾಲಯ ಕಚೇರಿ ನಿರ್ಮಾಣ ಮಾಡಲು ಉದ್ದೇಶಿತ ಆಸ್ತಿಯು ಮಹಾನಗರಪಾಲಿಕೆಯ ಆಸ್ತಿಯಾಗಿದೆ. ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳ ರೀತಿ ಪಾಲಿಕೆಯ ಆಸ್ತಿಗಳನ್ನು ಕೆಲವು ಉದ್ದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಲು ಅವಕಾಶವಿದೆ. ಈ ಪ್ರಕರಣದಲ್ಲಿಯೂ ಸಾರ್ವಜನಿಕ ಹರಾಜು ಮುಖಾಂತರವೇ ಆಸ್ತಿಯನ್ನು ಹಂಚಿಕೆ ಮಾಡಬೇಕಾಗಿದೆ ಎಂದು ತಿಳಿಸಿತ್ತು.
ಆದರೆ ಈ ಪ್ರಸ್ತಾವಿತ ವಿಷಯಕ್ಕೆ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಧಾರವಾಡ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯ ನಿರ್ಮಾಣ ಮಾಡುವ ಸಲುವಾಗಿ ಜಾಗವನ್ನು ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ತಗುಲುವ ವೆಚ್ಚವನ್ನು ಈಗಿನ ಸರ್ಕಾರದ ದರ ಅಥವಾ ಅದಕ್ಕಿಂತ ಕಡಿಮೆ ಬೆಲೆಯನ್ನು ಭರಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದರು.
ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿತ್ತು.
ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?
ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಸಂಬಂಧ ಕಾಯ್ದರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ವರದಿ ನೀಡಿದ್ದರೂ ಇದೇ ಜಾಗದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಮಾಡಲು ಖಾಲಿ ನಿವೇಶನ ಮಂಜೂರು ಮಾಡಲು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದನ್ನು ಸ್ಮರಿಸಬಹುದು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ರಾಷ್ಟ್ರೋತ್ಥಾನ ಪರಿಷತ್, ಜನಸೇವಾ ಟ್ರಸ್ಟ್ ಸೇರಿದಂತೆ ಸಂಘ ಪರಿವಾರದ ಇನ್ನಿತರೆ ಸಂಘ ಸಂಸ್ಥೆಗಳಿಗೂ ಗೋಮಾಳ, ಸರ್ಕಾರಿ ಜಮೀನು, ಬಿ ಖರಾಬು ಜಮೀನುಗಳನ್ನು ಚಿಲ್ಲರೆ ದರದಲ್ಲಿ ಮಂಜೂರು ಮಾಡಿತ್ತು.
ರಾಷ್ಟ್ರೋತ್ಥಾನ ಪರಿಷತ್, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್’ನ 13 ವರದಿಗಳು
ಇದೀಗ ಕಾಂಗ್ರೆಸ್ ಸರ್ಕಾರವು ಸಹ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಭವನಗಳಿಗೆ ಕಟ್ಟಡ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧೀನದಲ್ಲಿ ಮತ್ತು ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿರುವ ನಿವೇಶನಗಳ ಮೇಲೆ ಕಣ್ಣು ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.