ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಕಿ ಗ್ರಾಮದಲ್ಲಿ ಗೋಮಾಳ ಮಂಜೂರು; ಶೇ.5ರ ದರ ನಿಗದಿ, ನಿಯಮ ಉಲ್ಲಂಘನೆ

ಬೆಂಗಳೂರು;  ರಾಜ್ಯದ 6  ನಗರ ಸ್ಥಳೀಯ ಸಂಸ್ಥೆಗಳಲ್ಲಿ  ವಿವಿಧ ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿದ್ದ ಸಿಎ ನಿವೇಶನಗಳನ್ನು ನಿಯಮ ಮೀರಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೇವಲ ಶೇ.5ರಷ್ಟು  ರಿಯಾಯಿತಿ ದರದಲ್ಲಿ ನಗರಾಭಿವೃದ್ಧಿ ಇಲಾಖೆಯು ಮಂಜೂರು ಮಾಡಿರುವ ಬೆನ್ನಲ್ಲೇ ಕಂದಾಯ ಇಲಾಖೆಯೂ ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಕಾಂಗ್ರೆಸ್‌ ಭವನ ಟ್ರಸ್ಟ್‌ಗೂ ಸಹ ಗೋಮಾಳ ಜಮೀನುಗಳನ್ನೂ ಶೇ. 5ರ ದರದಲ್ಲಿ  ಮಂಜೂರು ಮಾಡಿದೆ.

 

ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಸಿಎ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡುವ ಮೂಲಕ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿನಷ್ಟು ನಷ್ಟವುಂಟು ಮಾಡುತ್ತಿರುವ ಬಗ್ಗೆ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಲಿ ಎಂದೂ ಸವಾಲು ಹಾಕಿದ್ದಾರೆ.

 

ಈ ಬೆಳವಣಿಗೆಗಳ ನಡುವೆಯೇ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿಯೂ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಗೋಮಾಳ ಜಮೀನು ಮಂಜೂರು ಮಾಡಿರುವ ಆದೇಶವು ಮುನ್ನೆಲೆಗೆ ಬಂದಿದೆ.

 

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಗ್ರಾಮದಲ್ಲಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 0.20 ಗುಂಟೆ ವಿಸ್ತೀರ್ಣದ ಗೋಮಾಳ ಜಮೀನನ್ನು ಕಂದಾಯ ಇಲಾಖೆಯು ಮಂಜೂರು ಮಾಡಿದೆ. ಈ ಸಂಬಂಧ ಕಂದಾಯ ಇಲಾಖೆಯು  2026ರ ಫೆ.12ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಾಂಗ್ರೆಸ್‌ ಭವನ ಟ್ರಸ್ಟ್‌, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಗ್ರಾಮದಲ್ಲಿ ಕಾಂಗ್ರೆಸ್‌ ಕಚೇರಿ ಕಟ್ಟಡ ನಿರ್ಮಾಣಕ್ಕೆ ಜಮೀನು ಕೋರಿ ಪ್ರಸ್ತಾವ ಸಲ್ಲಿಸಿತ್ತು. ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಕಂದಾಯ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದರು.

 

0-20 ಗುಂಟೆ ಗೋಮಾಳ ಮಂಜೂರು

 

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ಸರ್ವೆ ನಂಬರ್‍‌ 29ರಲ್ಲಿ ಒಟ್ಟು 9-30 ಎಕರೆ ವಿಸ್ತೀರ್ಣದಲ್ಲಿ ಸರ್ಕಾರಿ ಜಮೀನು ಇದೆ. ಪಹಣಿ ಕಲಂ 11ರಲ್ಲಿ ಈ ಜಮೀನು ಗಾಯರಾಣ ಎಂದು ನಮೂದಾಗಿದೆ. ಮಂಕಿ ಗ್ರಾಮದಲ್ಲಿ 7,065 ಜಾನುವಾರುಗಳಿವೆ. ಪ್ರಸ್ತಾವಿತ ಜಮೀನು ಒಳಗೊಂಡಂತೆ ಮಂಕಿ ಗ್ರಾಮದಲ್ಲಿ ಒಟ್ಟು 28 ಎಕರೆ 34 ಗುಂಟೆ ವಿಸ್ತೀರ್ಣದ ಗೋಮಾಳವಿದೆ. ಈ ಗೋಮಾಳ ಜಮೀನು ಹೊರತುಪಡಿಸಿ 4,966 ಎಕರೆ 22 ಗುಂಟೆ 4 ಆಣೆ ವಿಸ್ತೀರ್ಣದಲ್ಲಿ ಅರಣ್ಯ ಜಮೀನಿದೆ. ಅರಣ್ಯ ಜಮೀನು ಹೇರಳವಾಗಿರುವ ಕಾರಣ ಜಾನುವಾರುಗಳ ಮೇವಿಗಾಗಿ ಕೊರತೆ ಉಂಟಾಗುವುದಿಲ್ಲ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಸ್ತಾವದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

 

ಅಲ್ಲದೇ ಕಾಂಗ್ರೆಸ್‌ ಭವನ ಟ್ರಸ್ಟ್‌ ಪ್ರಸ್ತಾವಿಸಿರುವ ಜಮೀನಿನಲ್ಲಿ ಈಗಾಗಲೆ  ನಾಡ ಕಚೇರಿ ಕಂದಾಯ ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಾಣಕ್ಕೆ 3 ಎಕರೆ 30 ಗುಂಟೆ, ಕೆ ವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ 2 ಎಕರೆ ಮತ್ತು ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ 1 ಎಕರೆ ಕಾಯ್ದಿರಿಸಿದೆ. ಒಟ್ಟು 9-30 ಎಕರೆ ಜಮೀನಿನ ಪೈಕಿ 6-30 ಎಕರೆ ಕಾಯ್ದಿರಿಸಿದೆ. ಉಳಿದ 3 ಎಕರೆ ಜಮೀನು ಮಂಜೂರಾತಿಗೆ ಬಾಕಿ ಇದೆ ಎಂದು ವರದಿ ಮಾಡಿದ್ದರು.

 

ಮಂಜೂರಿಗೆ ನಿಯಮದಲ್ಲಿ ಅವಕಾಶವಿಲ್ಲ

 

ಕಾಂಗ್ರೆಸ್‌ ಭವನ ನಿರ್ಮಾಣಕ್ಕೆ ಕಾಯ್ದರಿಸಲು ಟ್ರಸ್ಟ್‌ ಕೋರಿರುವ ಜಮೀನು ಮಂಕಿ ಪಟ್ಟಣ ವ್ಯಾಪ್ತಿಯಲ್ಲಿದೆ. ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22-ಎ (2) ಪ್ರಕಾರ ಸರ್ಕಾರಿ ಭೂಮಿಯನ್ನು ನಗರ ಪೌರ ಸರಹದ್ದಿನೊಳಗೆ ಯಾವುದೇ ವೈಯಕ್ತಿಕ ಅಥವಾ ಖಾಸಗಿ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶವಿಲ್ಲ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಸರ್ಕಾರದ ಗಮನ ಸೆಳೆದಿದ್ದರು.

 

ಆದರೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನಿರ್ದೇಶನದಂತೆ ಕಂದಾಯ ಇಲಾಖೆಯು ಮಂಕಿ ಗ್ರಾಮದಲ್ಲಿ 0-20 ಗುಂಟೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಈ ಬಗ್ಗೆ ಚರ್ಚಿಸಿದ್ದ ಸಚಿವ ಸಂಪುಟವು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಅನುಮೋದಿಸಿತ್ತು.

 

ಶೇ.5ರ ದರದಲ್ಲಿ ಮಂಜೂರು

 

ಸಚಿವ ಸಂಪುಟ ಅನುಮೋದನೆ ಬಳಿಕ ಕಂದಾಯ ಇಲಾಖೆಯು ಮಂಕಿ ಗ್ರಾಮದಲ್ಲಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಪ್ರಸ್ತಾವಿತ ಜಮೀನಿನ ಕೃಷಿ ಮಾರ್ಗಸೂಚಿ ಮೌಲ್ಯದ ಶೇ. 5ರಷ್ಟು ದರದಲ್ಲಿ ಮಂಜೂರು ಮಾಡಲು ಆದೇಶ ಹೊರಡಿಸಿದೆ.

 

2023ರಿಂದ 2025ರ ಡಿಸೆಂಬರ್‍‌ವರೆಗೆ ಒಟ್ಟು 11 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿ ಎ ನಿವೇಶನಗಳನ್ನು ಮಂಜೂರು ಮಾಡುವ ಸಂಬಂಧ ಕಾಂಗ್ರೆಸ್‌ ಭವನ ಟ್ರಸ್ಟ್‌ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪೈಕಿ 5 ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಅಳತೆಯ ಸಿ ಎ ನಿವೇಶನಗಳನ್ನು ಪೌರಾಡಳಿತ ಇಲಾಖೆಯು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಿತ್ತು. ಮಂಜೂರಾತಿಗೆ ಬಾಕಿ ಇದ್ದ  6 ಸ್ಥಳೀಯ ಸಂಸ್ಥೆಗಳ ಪ್ರಸ್ತಾವಗಳನ್ನು  ಸಚಿವ ಸಂಪುಟವು ಅನುಮೋದಿಸಿತ್ತು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಶೇ.5ರ ದರದಲ್ಲಿ 10,732 ಚದರ ಮೀಟರ್ ಜಾಗ ಖಾಯಂ ಮಂಜೂರು; 16.89 ಕೋಟಿ ನಷ್ಟ

ರಾಜಕೀಯ ಪಕ್ಷಗಳ ಭವನಗಳಿಗೆ ನಾಗರಿಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲು ಕೆಟಿಸಿಪಿ (ಸಿ ಎ ನಿವೇಶನ ಹಂಚಿಕೆ) ನಿಯಮಗಳಲ್ಲಿ ಅವಕಾಶವಿಲ್ಲ. ಈ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನೆ ಆಯುಕ್ತಾಲಯವು ಸರ್ಕಾರಕ್ಕೆ ಸ್ಪಷ್ಟ ಅಭಿಪ್ರಾಯ ನೀಡಿತ್ತು. ಆದರೂ ಈ ಎಲ್ಲಾ ಅಭಿಪ್ರಾಯಗಳನ್ನು ಬದಿಗೊತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ನಿವೇಶನ ಮೌಲ್ಯದ ಶೇ.5ರಷ್ಟು ದರ ವಿಧಿಸಿ ಖಾಯಂ ಆಗಿ ಮಂಜೂರು ಮಾಡಿತ್ತು.

 

ದೇವನಹಳ್ಳಿ ಸೇರಿದಂತೆ ವಿವಿದೆಡೆ ಮೊಬೈಲ್‌ ರಿಪೇರಿ ತರಬೇತಿ ನೀಡುವ ಉದ್ದೇಶದ ಹೆಸರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌, ಸಿಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಂಡಿದೆ.

 

ಕಾಂಗ್ರೆಸ್‌ ಭವನ ಟ್ರಸ್ಟ್‌ನಿಂದ ಮೊಬೈಲ್‌ ರಿಪೇರಿ ತರಬೇತಿ; ಸಿಎ ನಿವೇಶನಗಳಿಗಾಗಿ ಹೊಸ ವೇ‍ಷ ತೊಟ್ಟ ಕಾಂಗ್ರೆಸ್

 

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಉದ್ದೇಶಿಸಿರುವ ಜಮೀನು, ಡೀಮ್ಡ್‌ ಅರಣ್ಯದ ಪಟ್ಟಿಯಲ್ಲಿ ಅಧಿಸೂಚಿಸಲಾಗಿದೆಯೇ ಎಂಬ ಬಗ್ಗೆ ಅರಣ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಪ್ರಸ್ತಾವನೆಯು ಸಹ ಪರಿಶೀಲನೆಯಲ್ಲಿದೆ.

 

ಅರಣ್ಯ ಜಮೀನಿನ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌; ಕುಮ್ಕಿ ಹಕ್ಕಿನಿಂದ ವಿನಾಯಿತಿ ಸಿಗಲಿದೆಯೇ?

 

ಉಡುಪಿ ಜಿಲ್ಲೆ ಮತ್ತು ತಾಲೂಕಿನ ಅಂಜಾರು ಗ್ರಾಮದ ಸರ್ವೆ ನಂಬರ್‍‌ 32ರಲ್ಲಿ ಒಟ್ಟಾರೆ 86 ಸೆಂಟ್ಸ್‌ ವಿಸ್ತೀರ್ಣದ ಗೋಮಾಳ  ಜಮೀನನ್ನೂ ಸಹ ಈಗಾಗಲೇ ಮಂಜೂರು ಮಾಡಿದೆ.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಸರ್ಕಾರಿ ಜಮೀನು; ಆರ್ಥಿಕ ಇಲಾಖೆಯಿಂದ ಪ್ರಸ್ತಾವ ತಿರಸ್ಕೃತವಾದರೂ ಮಂಜೂರು

 

ನಗರ ಸ್ಥಳೀಯ ಸಂಸ್ಥೆಗಳ ಸಾರ್ವಜನಿಕ ಉದ್ದೇಶಗಳನ್ನು ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ನಗರ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದಲ್ಲಿರುವ ನಾಗರಿಕ ಸೌಲಭ್ಯದ ನಿವೇಶನಗಳನ್ನು ಹಂಚಿಕೆ ಮಾಡಲು ಅವಕಾಶವಿಲ್ಲ.  ಈ ಸಂಬಂಧ   ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೇ (ಸರ್ಕಾರದ ಅಧಿಸೂಚನೆ ದಿನಾಂಕ;  24/05/2017) ಅಧಿಸೂಚನೆ ಹೊರಡಿಸಿತ್ತು. ಆದರೀಗ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲೇ 2017ರ ಅಧಿಸೂಚನೆಯನ್ನೇ  ಉಲ್ಲಂಘಿಸಿತ್ತು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ತನ್ನದೇ ಅಧಿಸೂಚನೆ ಉಲ್ಲಂಘಿಸಿದ ಕಾಂಗ್ರೆಸ್‌ ಸರ್ಕಾರ

 

ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿನ ಪುರಸಭೆಗಳ ವ್ಯಾಪ್ತಿಯಲ್ಲಿ 25 ನಿವೇಶನಗಳನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‍‌ ಅವರು ಸಚಿವ ರಹೀಂ ಖಾನ್‌ ಅವರಿಗೆ ನಿರ್ದೇಶನ ನೀಡಿದ್ದರು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 25 ನಿವೇಶನ; ಪೌರಾಡಳಿತ ಇಲಾಖೆ ಕುತ್ತಿಗೆ ಮೇಲೆ ಕುಳಿತ ಡಿ ಕೆ ಶಿವಕುಮಾರ್

 

ಕೊಪ್ಪಳ  ನಗರದಲ್ಲಿ ಸರ್ಕಾರಿ ಮಾರ್ಗಸೂಚಿ ದರದ ಪ್ರಕಾರ 1.31 ಕೋಟಿ ರು ಬೆಲೆಬಾಳುವ ಸಿ ಎ ನಿವೇಶನವನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೇವಲ 13.19 ಲಕ್ಷ ರುಪಾಯಿಗೆ ರಿಯಾಯಿತಿ ದರದಲ್ಲಿ ಮಂಜೂರು ಮಾಡಿತ್ತು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಕೊಪ್ಪಳದಲ್ಲೂ ನಿವೇಶನ; 1.18 ಕೋಟಿ ನಷ್ಟ, ನಿಯಮ ಉಲ್ಲಂಘಿಸಿದ ಸರ್ಕಾರ

 

ರಾಜ್ಯ ಕಾಂಗ್ರೆಸ್‌ ಸರ್ಕಾರವು ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ವಶ ಅಥವಾ ಸ್ವಾಧೀನದಲ್ಲಿರುವ ಸರ್ಕಾರಿ ಜಾಗಗಳನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡುತ್ತಿರುವ ಪ್ರಕರಣದಲ್ಲಿ  ಹಿತಾಸಕ್ತಿ ಸಂಘರ್ಷ ಎದುರಾಗಿತ್ತು.

 

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

 

ತುಮಕೂರು ಮಹಾನಗರ ಪಾಲಿಕೆಯ ಸುಪರ್ದಿಯಲ್ಲಿರುವ ಬಹು ಕೋಟಿ ಬೆಲೆಬಾಳುವ ಒಟ್ಟು ಜಮೀನಿನ ಪೈಕಿ 2 ಎಕರೆ ಜಾಗವನ್ನು ಸಾರ್ವಜನಿಕ ಹರಾಜು ನಡೆಸದೇ ನೇರವಾಗಿ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಈ ಜಾಗವು ವ್ಯಾಜ್ಯದಿಂದ ಕೂಡಿದೆಯಲ್ಲದೇ  ನ್ಯಾಯಾಲಯದಲ್ಲಿ ಅಸಲು ದಾವೆ ಅರ್ಜಿಯ ವಿಚಾರಣೆಯು ಇನ್ನೂ ಇತ್ಯರ್ಥಗೊಂಡಿಲ್ಲ. ಆದರೂ ಸಹ ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ 2 ಎಕರೆ ಜಮೀನು ಮಂಜೂರು ಮಾಡಲು  ಸಚಿವ ಸಂಪುಟವು  ತೀರ್ಮಾನ ತೆಗೆದುಕೊಂಡಿತ್ತು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ

 

ಹೀಗೆ ಬಹುಕೋಟಿಯಷ್ಟು  ಬೆಲೆ ಬಾಳುವ ಈ ಜಮೀನನ್ನು ಮಾರ್ಗಸೂಚಿ ಮೌಲ್ಯದ ಕೇವಲ ಶೇ.5ರಷ್ಟು ಅಂದರೇ 90 ಲಕ್ಷ ರು ದರ ವಿಧಿಸಿ ಈಗ ಕಾಂಗ್ರೆಸ್‌ ಪಕ್ಷಕ್ಕೆ ಮಂಜೂರು ಮಾಡಲಾಗಿದೆ. ಸಚಿವ ಸಂಪುಟವು ಕೈಗೊಂಡಿರುವ  ತೀರ್ಮಾನವು  (ಸಂಖ್ಯೆ ಸಿ; 396/2025) ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟಕ್ಕೆ ಕಾರಣವಾಗಿತ್ತು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

 

ಬೆಳಗಾವಿಯಲ್ಲಿನ  ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷಗಳಾದ ಹಿನ್ನೆಲೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷವು (ಕೆಪಿಸಿಸಿ) ರಾಜ್ಯಾದ್ಯಂತ 100 ಕಾಂಗ್ರೆಸ್‌ ಭವನಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಸಂಬಂಧ ಪಕ್ಷಕ್ಕೆ ಗುರಿ ನೀಡಿದ್ದರು.  ಹೀಗಾಗಿ ಎಲ್ಲಾ ಸಚಿವರೂ   ನಗರ ಮತ್ತು ಗ್ರಾಮೀಣ ಸ್ಥಳೀಯ ಸರ್ಕಾರಗಳ ಅಧೀನದಲ್ಲಿರುವ ಮತ್ತು ಅವುಗಳ ಹೆಸರಿನಲ್ಲಿರುವ ಜಮೀನು, ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು.

 

ಕಾಂಗ್ರೆಸ್‌ ಕಚೇರಿ ಕಟ್ಟಡ ನಿರ್ಮಾಣ; ಪಂಚಾಯ್ತಿಗಳ ಜಾಗದ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌

 

ಕಾಂಗ್ರೆಸ್‌ ಭವನ ಟ್ರಸ್ಟ್‌ ಯಾವ ಕಾಯ್ದೆ ಅಡಿ ನೋಂದಣಿಯಾಗಿದೆ ಎಂಬುದರ ಕುರಿತು ಇಲಾಖೆಯು ಪ್ರಶ್ನಿಸಿತ್ತು.

 

ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

 

ಹಿಂದುಳಿದ ಮತ್ತು ನಾಯಕ  ಜನಾಂಗದವರ ಸ್ಮಶಾನಕ್ಕೆ ಮೀಸಲಿಟ್ಟಿರುವುದು ಮತ್ತು  ಒಕ್ಕಲಿಗರ ಸಮುದಾಯ ಭವನ, ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ಮೆಟ್ರಿಕ್‌ ನಂತರದ  ವಿದ್ಯಾರ್ಥಿ ನಿಲಯ ಸ್ಥಾಪನೆ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗಾಗಿ ಕಾಯ್ದಿರಿಸಿದ್ದ ಸರ್ಕಾರಿ ಜಮೀನನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡಲು ಸಚಿವ ಸಂಪುಟವು ಈಚೆಗಷ್ಟೇ ಅನುಮೋದನೆ ನೀಡಿತ್ತು.

 

ಹಿಂದುಳಿದ ಜಾತಿಗಳ ಜನರ ಸ್ಮಶಾನ, ನಿವೇಶನ ಉದ್ದೇಶದ ಸರ್ಕಾರಿ ಭೂಮಿ ಮೇಲೂ ಕಾಂಗ್ರೆಸ್‌ ಭವನ ಟ್ರಸ್ಟ್‌ನ ಕಣ್ಣು

 

ಚಿಕ್ಕಬಳ್ಳಾಪುರ ತಾಲೂಕು ನಂದಿ ಹೋಬಳಿಯ ಅಗಲಕುರ್ಕಿ ಗ್ರಾಮದಲ್ಲಿ ಅನುಮೋದಿತ ಬಡಾವಣೆಯಲ್ಲಿ ನಿವೇಶನ ಕೋರಿದ್ದರು. ಆದರೀಗ ನಗರಾಭಿವೃದ್ದಿ ಇಲಾಖೆಯು  ಸ್ಥಳವನ್ನು ಬದಲಾಯಿಸಿತ್ತು.

 

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ‘ಪುಕ್ಕಟೆ’ಯಾಗಿ ಸಿ ಎ ನಿವೇಶನ; ಬೊಕ್ಕಸಕ್ಕೆ ನಷ್ಟವಾದರೂ ಸಚಿವ ಸಂಪುಟಕ್ಕೆ ಕಡತ ಮಂಡನೆ

 

ಚಿಕ್ಕಬಳ್ಳಾಪುರ ಜಿಲ್ಲೆಗೆ  ಉಸ್ತುವಾರಿ ಸಚಿವ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್‍‌ ಅವರ ಸೂಚನೆಯಂತೆ ನಗರಾಭಿವೃದ್ದಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಭವನದ ಕಟ್ಟಡ ನಿರ್ಮಾಣಕ್ಕೆ ನಿವೇಶನವನ್ನು ಮಂಜೂರು ಮಾಡಲು ತಯಾರಿ ನಡೆಸಿತ್ತು. ಈ ಕುರಿತು ‘ದಿ ಫೈಲ್‌’, ಮೇ 5ರಂದೇ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಕಾಂಗ್ರೆಸ್‌ ಭವನಗಳಿಗೆ ಸಿ ಎ ನಿವೇಶನ!; ಬಹುಕೋಟಿ ಬೆಲೆಯಿದ್ದರೂ ಉಚಿತ ಮಂಜೂರಿಗೆ ತರಾತುರಿ

 

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ವಶದಲ್ಲಿರುವ ನಿವೇಶನವನ್ನು ಜಿಲ್ಲಾ ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಚಿವ ಸಂಪುಟವು ಅನುಮೋದಿಸಿತ್ತು.

 

ಕಾಂಗ್ರೆಸ್‌ ಪಕ್ಷಕ್ಕೆ ನಗರ ಪಾಲಿಕೆ ಆಸ್ತಿ ಮಂಜೂರು; ಬಿಜೆಪಿ ಹಾದಿ ತುಳಿದ ಕಾಂಗ್ರೆಸ್‌, ಕಡಿಮೆ ಬೆಲೆ ನಿಗದಿಯೇಕೆ?

 

ಆದರೀಗ ಆರ್ಥಿಕ ಇಲಾಖೆಯು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಸ್ತಿಯನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಒಪ್ಪಿಗೆ ಸೂಚಿಸಿತ್ತು. ಇದರ ಅಭಿಪ್ರಾಯದ ಮೇರೆಗೆ ಸಚಿವ ಸಂಪುಟವೂ 2025ರ ಫೆ.20ರಂದು ನಡೆದ ಸಭೆಯಲ್ಲಿ ಮಂಜೂರು ಮಾಡಿತ್ತು.

 

ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ

 

ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿತ್ತು.

 

ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?

 

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಸಂಘ ಪರಿವಾರದ ಇನ್ನಿತರೆ ಸಂಘ ಸಂಸ್ಥೆಗಳಿಗೂ ಗೋಮಾಳ, ಸರ್ಕಾರಿ ಜಮೀನು, ಬಿ ಖರಾಬು ಜಮೀನುಗಳನ್ನು ಚಿಲ್ಲರೆ ದರದಲ್ಲಿ ಮಂಜೂರು ಮಾಡಿತ್ತು.

 

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

 

ಇದೀಗ ಕಾಂಗ್ರೆಸ್‌ ಸರ್ಕಾರವು ಸಹ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ ಭವನಗಳಿಗೆ ಕಟ್ಟಡ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧೀನದಲ್ಲಿ ಮತ್ತು ನಾಗರಿಕ ಸೌಲಭ್ಯಗಳಿಗೆಂದು ಮೀಸಲಿರಿಸಿರುವ ನಿವೇಶನಗಳ ಮೇಲೆ ಕಣ್ಣು ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

Your generous support will help us remain independent and work without fear.

Latest News

Related Posts