ವಿಜಯೇಂದ್ರ ವಿರುದ್ಧ ಡಿಜಿಐಜಿಗೆ ಜನಾಧಿಕಾರ ಸಂಘರ್ಷ ಪರಿಷತ್‌ ದೂರು;ಠಾಣೆ ಮೆಟ್ಟಿಲೇರಿದ ಸುಲಿಗೆ ಪ್ರಕರಣ

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರೂ ಆಗಿರುವ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ ಸುಲಿಗೆ ಮತ್ತು ಕ್ರಿಮಿನಲ್‌ ಸಂಚು ಆರೋಪದಡಿಯಲ್ಲಿ ಇದೀಗ ರಾಜ್ಯ ಪೊಲೀಸ್‌ ಮಹಾನಿರ್ದೇಶಕ, ಬೆಂಗಳೂರು ಪೊಲೀಸ್‌ ಕಮಿಷನರ್‌ ಹಾಗೂ ಶೇಷಾದ್ರಿಪುರಂ ಠಾಣಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದೆ.

ಬಿ ವೈ ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದಿರುವ ಈ ಆರೋಪವು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಬೆನ್ನಲ್ಲೇ ಜನಾಧಿಕಾರ ಸಂಘರ್ಷ ಪರಿಷತ್‌ ಪ್ರಕರಣವನ್ನು ಪೊಲೀಸ್‌ ಇಲಾಖೆ ಮೆಟ್ಟಿಲೇರಿಸಿದೆ.

ವಸತಿ ಸಮುಚ್ಛಯ ನಿರ್ಮಾಣದ ರಾಮಲಿಂಗಂ ಕನ್ಸ್‌ಟ್ರಕ್ಷನ್ಸ್‌ ಕಂಪನಿಯಿಂದ ನಗದು ಮತ್ತು ಆರ್‌ಟಿಜಿಎಸ್‌ ಮೂಲಕ ಸುಮಾರು 20 ಕೋಟಿ ರು.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ದೂರಿನಲ್ಲಿ ವಿವರಿಸಿದೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬಿ ವೈ ವಿಜಯೇಂದ್ರ ಮತ್ತು ಶಶಿಧರ್‌ ಮರಡಿ ಎಂಬುವರ ಮೇಲೆ ಐಪಿಸಿ 384, ಸೆಕ್ಷನ್‌ 34 ಮತ್ತು 120(ಬಿ) ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ಆಗ್ರಹಿಸಿದೆ. ಖಾಸಗಿ ಮಾಧ್ಯಮವೊಂದು ಇತ್ತೀಚೆಗೆ ಮಾಡಿದ್ದ ವರದಿ ಆಧರಿಸಿ ಈ ದೂರನ್ನು ಸಲ್ಲಿಸಿದೆ.
ಶಶಿಧರ್‌ ಮರಡಿ ಅವರು ಹೊಂದಿರುವ ಬ್ಯಾಂಕ್‌ ಖಾತೆಗೆ 7.4 ಕೋಟಿ ರು.ಗಳನ್ನು ನಿರ್ಮಾಣ ಕಂಪನಿ ಆರ್‌ಟಿಜಿಎಸ್‌ ಮೂಲಕ ಸಂದಾಯ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದೆ.

ಅದೇ ರೀತಿ ವಾಟ್ಸಾಪ್‌ ಸಂಭಾಷಣೆಯಲ್ಲಿ ನಮೂದಿಸಿದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಶೇ‍ಷಾದ್ರಿಪುರಂ ಶಾಖೆಯಲ್ಲಿ ಶಶಿಧರ್‌ ಮರಡಿ ಹೊಂದಿರುವ ಉಳಿತಾಯ ಖಾತೆಗೆ ಜನಾಧಿಕಾರ ಸಂಘರ್ಷ ಪರಿಷತ್‌ ನ ಪ್ರಕಾಶ್‌ ಬಾಬು ಎಂಬುವರು 100 ರು. ನಗದನ್ನು ಪಾವತಿಸಿ ಖಾತೆಯನ್ನು ಖಚಿತಪಡಿಸಿಕೊಂಡಿರುವುದನ್ನೂ ದೂರಿನಲ್ಲಿ ಉಲ್ಲೇಖಿಸಿರುವುದು ವಿಶೇಷ.

ಅಧಿಕಾರಿಯೊಬ್ಬರು ಮುಖ್ಯಮಂತ್ರಿ ಹೆಸರು ಬಳಸಿಕೊಂಡು ನಿರ್ಮಾಣ ಕಂಪನಿಯಿಂದ ಲಂಚ ಪಡೆದಿರುವುದು ತಿಳಿದಿದ್ದರೂ ಸಹ ಆ ಅಧಿಕಾರಿ ಮೇಲೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸದಿರುವುದು ಬಿ ವೈ ವಿಜಯೇಂದ್ರ ಅವರ ಮೇಲೆ ಅನುಮಾನಕ್ಕೆ ಕಾರಣವಾಗಿದೆ. ಈ ಅನುಮಾನದ ಹಿನ್ನೆಲೆಯಲ್ಲಿ ನಿರ್ಮಾಣ ಕಂಪನಿಗೆ ಬೆದರಿಕೆ ಹಾಕಿ ಹಣ ನೀಡಲು ಒತ್ತಡ ಹೇರಿ ನಿರ್ಮಾಣ ಕಾರ್ಯಕ್ಕೆ ತಡೆ ಹಾಕಿರುವುದು ಸುಲಿಗೆ ಪ್ರಕರಣಕ್ಕೆ ಬಲವಾದ ಸಾಕ್ಷಿಯಾಗಿದೆ ಎಂದು ದೂರಿನಲ್ಲಿ ಪರಿಷತ್‌ ವಿವರಿಸಿದೆ.

ವಾಟ್ಸಾಪ್‌ ಚಾಟ್‌ಗಳಲ್ಲಿ ಶಶಿಧರ್‌ ಮರಡಿ ಎಂಬುವರು ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ನಂತರ ಹಣ ಪಡೆದಿರುವುದು, ನಗದು ಹಾಗೂ ಆರ್‌ಟಿಜಿಎಸ್‌ ಮೂಲಕ ತಮ್ಮ ಖಾತೆಗೆ ಹಣ ವರ್ಗಾವಣೆ ಆಗಿರುವುದು ಮತ್ತು ತಮ್ಮ ಸಹಚರರ ಮೂಲಕ ಸಮನ್ವಯ ಮಾಡಲು ತಿಳಿಸಿರುವುದು ಹಾಗೂ ಹಣ ಪಡೆದಿರುವ ಬಗ್ಗೆಯೂ ಖಚಿತಪಡಿಸಿರುವುದು ಈ ಪ್ರಕರಣಕ್ಕೆ ಹೆಚ್ಚಿನ ಪುಷ್ಠಿ ನೀಡುತ್ತದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಣ ಕಂಪನಿ ರಾಮಲಿಂಗಂ ಕನ್ಸ್‌ಟ್ರಕ್ಷನ್ಸ್‌ ಮತ್ತು ಖಾಸಗಿ ಮಾಧ್ಯಮದ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಬೇಕು ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ಕೋರಿದೆ.

SUPPORT THE FILE

Latest News

Related Posts